ಹೆಣ್ಣು ಮಕ್ಕಳ ರಕ್ಷಣೆಗೆ ಪ್ರತ್ಯೇಕ ನೀತಿ: ಸಚಿವೆ ಉಮಾಶ್ರೀ
ಬೆಂಗಳೂರು, ಸೆ.14: ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಪ್ರತ್ಯೇಕ ನೀತಿಯನ್ನು ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಆಯೋಜಿಸಿದ್ದ ದಕ್ಷಿಣ ಭಾರತಮಟ್ಟದ ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಣ್ಣು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತ್ಯೇಕ ನೀತಿಯನ್ನು ರೂಪಿಸಲಾಗುವುದು. ಬಾಲ್ಯ ವಿವಾಹ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದರು.
ವಿಕಲಚೇತನರ ಮಕ್ಕಳ ಶಿಕ್ಷಣಕ್ಕೆ ಸರಕಾರ ಹೆಚ್ಚಿನ ಅನುದಾನ ಒದಗಿಸುತ್ತಿದೆ. ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಇದ್ದಂತಹ ಕಾನೂನುಗಳನ್ನು ಸರಳೀಕರಣಗೊಳಿಸಲಾಗಿದೆ. ದತ್ತು ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ಅನಾಥ ಮಕ್ಕಳಿಗೆ ಬದುಕನ್ನು ಕಟ್ಟಿಕೊಡುವ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ 2ನೆ ಸ್ಥಾನದಲ್ಲಿದೆ ಎಂದು ಹೆಳೀದರು.
ಮಕ್ಕಳಲ್ಲಿನ ಅಪೌಷ್ಟಿಕತೆ ನೀಗಿಸಲು ಮಧ್ಯಾಹ್ನದ ಬಿಸಿಯೂಟದ ಜತೆಗೆ ಕ್ಷೀರಭಾಗ್ಯ ಯೋಜನೆಯಡಿ ಕೆನೆಹಾಲು ಮತ್ತು ಮೊಟ್ಟೆ ನೀಡಲಾಗುತ್ತಿದೆ. ಇದರಿಂದಾಗಿ ಅಪೌಷ್ಟಿಕತೆಯ ಪ್ರಮಾಣ ಜುಲೈ ಅಂತ್ಯದ ವೇಳೆಗೆ ಶೇ. 0.46ಕ್ಕೆ ಇಳಿದಿದೆ ಎಂದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಮತ್ತು ಅವರ ಭವಿಷ್ಯ ಉಜ್ವಲಗೊಳಿಸುವ ಸಂಬಂಧ ಹಲವಾರು ಕಾನೂನುಗಳಿವೆ. ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತಿಲ್ಲ. ಇರುವ ಕಾನೂನುಗಳ ಪೈಕಿ ಕೆಲವು ತೀರಾ ಹಳೆಯದಾಗಿದ್ದು, ಅವುಗಳಿಗೆ ತಿದ್ದುಪಡಿ ತರುವ ಮೂಲಕ ಶಕ್ತಿ ತುಂಬಬೇಕಾಗಿದೆ ಎಂದರು.
ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಇಡೀ ದೇಶದಲ್ಲೇ ಮೊದಲ ಬಾರಿಗೆ ವಿಧಾನ ಪರಿಷತ್ತಿನಲ್ಲಿ ಸುದೀರ್ಘ ಚರ್ಚೆ ಮಾಡಲಾಗಿದೆ. ಹಲವಾರು ಸದಸ್ಯರು, ಸಚಿವರು ಚರ್ಚೆಯಲ್ಲಿ ಪಾಲ್ಗೊಂಡು ಉಪಯುಕ್ತ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಇದು ದೇಶಕ್ಕೆ ಮಾದರಿಯಾಗಿದೆ. ಉಳಿದ ರಾಜ್ಯಗಳಲ್ಲೂ ಇಂಥ ಚರ್ಚೆಗಳಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನಲ್ಲಿ ಸರಕಾರಿ ಮುಖ್ಯ ಸಚೇತಕ ಐವಾನ್ ಡಿಸೋಜಾ,ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಚೌಡರೆಡ್ಡಿ, ಯೂನಿಸೆಫ್‌ನ ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳ ಮುಖ್ಯಸ್ಥೆ ವಿ.ಮೈಕಲ್ ರಸ್ಡಿಯಾ ಸೇರಿದಂತೆ ಇತರರು ಇದ್ದರು.