ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಸೆ.14: ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವ ಮಾತೃಪೂರ್ಣ ಯೋಜನೆಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮುಂದಿನ ತಿಂಗಳು ಅ.2ರಿಂದ ಜಾರಿಗೆ ಬರಲಿರುವ ಮಾತೃಪೂರ್ಣ ಯೋಜನೆಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಲು ಸರಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘ ಸೇರಿ ಇತರೆ ಹಲವು ಸಂಘಟನೆಗಳು ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಸರಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಂಗಳೂರು ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿತು. ಆದರೆ, ಸರಕಾರದ ಆದೇಶಕ್ಕೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿ ಪುರಸ್ಕರಿಸಲು ನ್ಯಾಯಪೀಠ ಇದೇ ವೇಳೆ ನಿರಾಕರಿಸಿತು. ಬಳಿಕ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರ ಮತ್ತು ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಿತ್ಯ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಬಿಸಿಯೂಟ ಸಿದ್ಧಪಡಿಸುವುದು ಸೇರಿ ಇನ್ನು ಅನೇಕ ಕಾರ್ಯ ಮಾಡುತ್ತಾರೆ. ಇದರಿಂದ ಈಗಾಗಲೇ ಅವರ ಮೇಲೆ ಹೆಚ್ಚಿನ ಕಾರ್ಯದೊತ್ತಡವಿದೆ. ಈಗ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವ ಮಾತೃಪೂರ್ಣ ಯೋಜನೆ ಜಾರಿಯ ಹೊಣೆಯನ್ನೂ ಅಂಗನವಾಡಿ ಕಾರ್ಯಕತೆರ್ಯರಿಗೆ ವಹಿಸಿರುವ ಸರಕಾರದ ನಿರ್ಧಾರ ಸರಿಯಾಗಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ಗರ್ಭಿಣಿ ಮತ್ತು ಬಾಣಂತಿಯರ ಕುರಿತ ದಾಖಲೆಗಳನ್ನು ನಿರ್ವಹಿಸುವ ಮತ್ತು ಅವರಿಗೆ ಪೌಷ್ಟಿಕ ಆಹಾರ ನೀಡುವ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಮಾಡುತ್ತಿದ್ದಾರೆ.
ಈ ಮಾತೃಪೂರ್ಣ ಯೋಜನೆಯಿಂದ ಅವರ ಮೇಲೆ ಹೆಚ್ಚಿನ ಹೊರೆ ಬೀಳುವುದಿಲ್ಲ ಎಂದು ತಿಳಿಸಿದರು.