ಸೂಕ್ತ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಗೆ ಹೈಕೋರ್ಟ್ ಸೂಚನೆ
ಬೆಂಗಳೂರು, ಸೆ.14: ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಸೆ.30ರಂದು ಆನೆ ಮೇಲೆ ಚೌಡೇಶ್ವರಿ ದೇವಿಯ ಮೆರವಣಿಗೆ ನಡೆಸುವುದಕ್ಕೆ ಅನುಮತಿ ಕೋರಿ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ಆಡಳಿತ ಮಂಡಳಿ ಸಲ್ಲಿಸಿದ್ದ ಮನವಿಯನ್ನು ಒಂದು ವಾರದಲ್ಲಿ ಕಾನೂನಿನ ಪ್ರಕಾರ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಹೈಕೋರ್ಟ್ ಸೂಚಿಸಿದೆ.
ಅಂಬಾರಿ ಮೆರವಣಿಗೆ ನಡೆಸುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ್ದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ಕ್ರಮ ಪ್ರಶ್ನಿಸಿ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಆಡಳಿತ ಮಂಡಳಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ಸೆ.30ರಂದು ದೇವಸ್ಥಾನವು ದಸರಾ ಹಬ್ಬದ ಪ್ರಯುಕ್ತ ಅಂಬಾರಿ ಮೆರವಣಿಗೆ ನಡೆಸುತ್ತಿದೆ. ಹೀಗಾಗಿ, ಅಂಬಾರಿ ಮೆರವಣಿಗೆಗೆ ಅನುಮತಿ ಕೋರಿ ಮನವಿ ಸಲ್ಲಿಸಲಾಗಿತ್ತು ಎಂದು ಪೀಠಕ್ಕೆ ತಿಳಿಸಿದರು.
ಕೇಂದ್ರ ಸರಕಾರದ ನಿಯಮಗಳ ಪ್ರಕಾರ ಅಂಬಾರಿ ಮೆರವಣಿಗೆಗೆ ಆನೆಗಳನ್ನು ಬಳಕೆ ಮಾಡುವುದಕ್ಕೆ ಯಾವುದೇ ನಿಷೇಧ ಹೇರಿಲ್ಲ. ಹೀಗಾಗಿ, ಅಂಬಾರಿ ಮೆರವಣಿಗೆಗೆ ಅನುಮತಿ ನೀಡಲು ಅರಣ್ಯ ಸಂರಕ್ಷಣಾಧಿಕಾರಿಗೆ ನಿರ್ದೇಶಿಸುವಂತೆ ಕೋರಿದರು. ಈ ವಾದ ಪರಿಗಣಿಸಿದ ನ್ಯಾಯಪೀಠ ಮೇಲಿನಂತೆ ನಿರ್ದೇಶನ ನೀಡಿದೆ.