ಪ್ರೊ. ಬಿ.ಜೆ.ಸುವರ್ಣ

Update: 2017-09-14 17:13 GMT

ಪುತ್ತೂರು, ಸೆ. 14: ಸರ್ಕಾರಿ ಪ್ರಯೋಜಿತ ಕಾರ್ಯಕ್ರಮಗಳ ಉದ್ಘೋಷಕರಾಗಿ ಗುರುತಿಸಿಕೊಂಡಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಭೌತಶಾಸ್ತ್ರ ಉಪನ್ಯಾಸಕ, ಪುತ್ತೂರು ನಗರದ ಹೊರವಲಯದ ಉರ್ಲಾಂಡಿ ನಿವಾಸಿ ಪ್ರೊ.ಬಿ.ಜೆ.ಸುವರ್ಣ (64) ಅವರು ಅನಾರೋಗ್ಯದಿಂದಾಗಿ ಗುರುವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಕರುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಬಿ.ಜೆ.ಸುವರ್ಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆಗೊಳಪಡಿಸಲಾಗಿತ್ತು. ಆದರೆ ಇಲ್ಲಿನ ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಗುರುವಾರ ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಪುತ್ತೂರಿನ ಸಂತ ಫಿಲೋಮಿನಾ ಪದವಿ ಕಾಲೇಜಿನಲ್ಲಿ ಸುದೀರ್ಘ ಕಾಲ ಭೌತ ಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ತಮ್ಮ ನಿವೃತ್ತಿಯ ಬಳಿಕ ಸವಣೂರಿನ ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಪುತ್ತೂರಿನಲ್ಲಿ ನಡೆಯುತ್ತಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ತಮ್ಮ ಶೈಲಿಯ ಮೂಲಕ ಗಮನ ಸೆಳೆದಿದ್ದರು.

ಪುತ್ತೂರು ತಾಲೂಕು ಬಿಲ್ಲವ ಸಂಘ, ಕಿಲ್ಲೆ ಮೈದಾನದ ಸಾರ್ವಜನಿಕ ಗಣೇಶೋತ್ಸವದ ದೇವತಾ ಸಮಿತಿ ಸೇರಿದಂತೆ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ಸಕ್ರೀಯರಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.  ನಿಧನಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು, ಉಪನ್ಯಾಸಕರುಗಳು , ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಸಂಘಟಕರುಗಳು, ಪತ್ರಕರ್ತರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಗುರುವಾರ ಮೃತರ ಗೌರವಾರ್ಥ ಸಂತಾಪ ಸೂಚಕ ಸಭೆ ನಡೆಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ