ಮಾತೃಪೂರ್ಣ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಅಪರ ಜಿಲ್ಲಾಧಿಕಾರಿ ಸೂಚನೆ
ಮಂಡ್ಯ, ಸೆ.14: ಅಕ್ಟೋಬರ್ 2ರಿಂದ ಆರಂಭವಾಗಲಿರುವ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದನ್ವಯ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯೋಜನೆಯ ಅನುಷ್ಠಾನ ಕುರಿತು ಗುರುವಾರ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಕ್ತಹೀನತೆ ಮತ್ತು ಅಪೌಷ್ಠಿಕತೆಯಿಂದ ಬಳಲುತ್ತಿರುವ ಗರ್ಭಿಣಿಯರು ಹಾಗು ಬಾಣಂತಿಯರ ಪ್ರಮಾಣವನ್ನು ಕಡಿಮೆ ಉದ್ದೇಶದಿಂದ ಮಾತೃಪೂರ್ಣ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಗರ್ಭಿಣಿಯರು 100 ಕಬ್ಬಿಣಾಂಶದ ಮಾತ್ರೆಗಳನ್ನು ಸೇವಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ನೀಡುವ ಆಹಾರವನ್ನು ಕುಟುಂಬದ ಇತರೆ ಸದಸ್ಯರೊಡನೆ ಹಂಚಿಕೊಳ್ಳದೆ ಸ್ವತಃ ಸೇವಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಗರ್ಭಿಣಿ ಮತ್ತು ಬಾಣಂತಿಯರಿಗೆ ನಿಗದಿಪಡಿಸಿರುವ ಪೌಷ್ಠಿಕ ಬಿಸಿ ಊಟ ಕಾರ್ಯಕ್ರಮ ಅನುಷ್ಠಾನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು, ನಿರೂಪಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜವಬ್ದಾರರಾಗಿದ್ದು, ಈ ಯೋಜನೆಯನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ಮಾತೃಪೂರ್ಣ ಯೋಜನೆ ಉಸ್ತುವಾರಿ ಮತ್ತು ಮೌಲ್ಯಮಾಪನಕ್ಕಾಗಿ ಜಿಲ್ಲಾ ಉಪನಿರ್ದೇಶಕರು ಹಾಗು ತಾಲೂಕುಮಟ್ಟಗಳಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೋಡಲ್ ಅಧಿಕಾರಿಗಳಾಗಿರುತ್ತಾರೆ. ಪ್ರತಿ ತಿಂಗಳು ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಯಬೇಕು. ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗು ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಯೋಜನೆಯ ಪ್ರಗತಿ ಕುರಿತು ಪ್ರತಿ ತಿಂಗಳು ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ದಿವಾಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಮಾದಪ್ಪ, ಆಹಾರ ಇಲಾಖೆ ಸಹಾಯ ನಿರ್ದೇಶಕ ರಾಮಚಂದ್ರ ಹಾಗು ಇತರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.