×
Ad

ಜೆಡಿಎಸ್ ಜತೆ ಮೈತ್ರಿಗೆ ನಿರ್ಧಾರ: ಡಾ.ಜಿ.ಪರಮೇಶ್ವರ್

Update: 2017-09-15 19:59 IST

ಬೆಂಗಳೂರು, ಸೆ.15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಯನ್ನು ಮುಂದುವರೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಬಿಬಿಎಂಪಿ ಸದಸ್ಯರೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜೆಡಿಎಸ್ ಜೊತೆ ಮೈತ್ರಿಯನ್ನು ಮುಂದುವರೆಸುವ ಕುರಿತು ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆ ಇನ್ನು ಅಂತಿಮವಾಗಿಲ್ಲ. ಸಂದರ್ಭ ಬಂದಾಗ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ಅವರು ಹೇಳಿದರು.

ಗೃಹ ಸಚಿವ ರಾಮಲಿಂಗಾರೆಡ್ಡಿ ಈಗಾಗಲೇ ದೇವೇಗೌಡರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅಗತ್ಯ ಸಂದರ್ಭದಲ್ಲಿ ನಾನು ಅವರಿಬ್ಬರನ್ನೂ ಭೇಟಿ ಮಾಡಿ ಚರ್ಚಿಸುತ್ತೇನೆ. ರಾಜ್ಯ ಸರಕಾರದಲ್ಲಿನ ಸಚಿವರ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಆರು ತಿಂಗಳಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಈವರೆಗೆ ಒಂದೇ ಒಂದು ದಾಖಲೆಯನ್ನು ಬಿಡುಗಡೆ ಮಾಡಿಲ್ಲ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪ ಮೊದಲು ಸಚಿವರ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ, ಆನಂತರ ನಾನು ಅವರ ಆರೋಪಗಳಿಗೆ ಉತ್ತರ ನೀಡುತ್ತೇನೆ. ಸುಮ್ಮನೆ ಆರೋಪಗಳನ್ನು ಮಾಡಿಕೊಂಡು ಕೂರುವುದು ಬೇಡ ಎಂದರು.

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಆಗ್ರಹಿಸಿ ಬಿಜೆಪಿ ಶನಿವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಆದರೆ, ಬಿಜೆಪಿಯವರು ಯಾವ ಉದ್ದೇಶವಿಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ ಅನ್ನೋದು ತಿಳಿಯುತ್ತಿಲ್ಲ. ಗಣಪತಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಸಿಬಿಐ ತನ್ನ ತನಿಖೆಯನ್ನು ಮಾಡುತ್ತದೆ. ಕೆ.ಜೆ.ಜಾರ್ಜ್ ಯಾಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪರಮೇಶ್ವರ್ ಪ್ರಶ್ನಿಸಿದರು.

ಇಲೆಕ್ಟ್ರಾನಿಕ್ ಮತಯಂತ್ರಗಳ ವಿರುದ್ಧ ದೂರು: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಬಳಿಕ ಇಲೆಕ್ಟ್ರಾನಿಕ್ ಮತ ಯಂತ್ರ(ಇವಿಎಂ)ಗಳ ಮೇಲೆ ಎಲ್ಲರಿಗೂ ಅನುಮಾನವಿದೆ. ಅದೇ ರೀತಿ ನಮಗೂ ಇವಿಎಂಗಳ ಬಗ್ಗೆ ಅನುಮಾನವಿದೆ. ಅಗತ್ಯವಿದ್ದರೆ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ. ಈ ಹಿಂದಿನ ಪದ್ಧತಿಯಂತೆ ಮುಂದಿನ ವಿಧಾನಸಭಾ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಸಿ.ಎಂ.ಇಬ್ರಾಹೀಂ, ಪಿ.ರಮೇಶ್, ಶಾಸಕರಾದ ಭೈರತಿ ಬಸವರಾಜ, ಎಸ್.ಟಿ.ಸೋಮಶೇಖರ್, ಮುಖಂಡರಾದ ಪಿ.ಆರ್.ರಮೇಶ್, ಎಂ.ಸಿ.ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News