×
Ad

ದೀನ ದಲಿತರ ಕೈ ಹಿಡಿದು ಸಮಾಜದ ಮುಖ್ಯವಾಹಿನಿಗೆ ಕರೆತನ್ನಿ: ವಿಜಯ ರಾಹಟ್ಕರ್

Update: 2017-09-16 21:13 IST

ಬೆಂಗಳೂರು, ಸೆ.16: ಸಮಾಜದಲ್ಲಿ ಹಿಂದುಳಿದಿರುವ ದೀನ ದಲಿತರ ಕೈ ಹಿಡಿದು ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸವನ್ನು ಬಿಜೆಪಿ ಮಹಿಳಾ ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಿಜಯ ರಾಹಟ್ಕರ್ ಕರೆ ನೀಡಿದ್ದಾರೆ.

ಶನಿವಾರ ನಗರದ ಬೆಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೀನ ದಲಿತರು, ಅಸಹಾಯಕರು ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವು ಕೂಡ. ಅವರ ಉದ್ದೇಶವನ್ನು ಸಾಕಾರಗೊಳಿಸಲು ಮಹಿಳಾ ಕಾರ್ಯಕರ್ತರು ಕೈಜೋಡಿಸಬೇಕು ಎಂದು ಹೇಳಿದರು.

ಬಿಜೆಪಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಆಡಳಿತ ಬಾಗಿಲು ತೆರೆದಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲು ಮಹಿಳಾ ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಧಾನಿ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರಚುರಪಡಿಸಬೇಕು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಪಕ್ಷವನ್ನು ಬಲಪಡಿಸಲು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಬೃಹತ್ ಮಹಿಳಾ ಸಮಾವೇಶ ನಡೆಸಲು ಚಿಂತಿಸಲಾಗಿದೆ. ನಮ್ಮ ಸರಕಾರ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಯೋಜನೆಯನ್ನು ಕಾಂಗ್ರೆಸ್ ಸರಕಾರ ಕಡೆಗಣಿಸಿದೆ. ಮುಂದೆ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಅದನ್ನು ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಮಹಿಳಾ ಮೋರ್ಚಾ ಹೆಚ್ಚಿನ ಸದಸ್ಯತ್ವ ಅಭಿಯಾನ ನಡೆಸಬೇಕು. ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯವನ್ನು ಮನೆ ಮನೆಗೆ ತಲುಪಿಸಬೇಕು. ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡಬೇಕು ಎಂದು ಕರೆಕೊಟ್ಟರು.

ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ವಿಧಾನ ಪರಿಷತ್ ಸದಸ್ಯೆ ತಾರಾ, ನಟಿ ಶೃತಿ ಸೇರಿದಂತೆ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News