ರಾಜ್ಯ ಸರಕಾರದ ಸಾಧನೆ ಕುರಿತು ಬಹಿರಂಗ ಚರ್ಚೆಗೆ ಸಿದ್ಧ: ಕೆ.ಸಿ.ವೇಣುಗೋಪಾಲ್
ಬೆಂಗಳೂರು, ಸೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ನಾಲ್ಕು ವರ್ಷಗಳಲ್ಲಿ ಮಾಡಿರುವ ಸಾಧನೆಗಳ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಎಂದು ಬಿಜೆಪಿ ನಾಯಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸವಾಲು ಹಾಕಿದ್ದಾರೆ.
ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಹೇಳಿಕೆಯನ್ನು ಖಂಡಿಸಿ, ಈ ಮೇಲಿನಂತೆ ಸವಾಲು ಹಾಕಿದರು.
ರಾಜ್ಯ ಸರಕಾರವು ಭ್ರಷ್ಟಾಚಾರ ಹಾಗೂ ದುರಾಡಳಿತದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವುದಾದರೆ ನಾವು ಸಿದ್ಧವಿದ್ದೇವೆ. ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿ ಮಾಡಲಿ ಎಂದು ತಿರುಗೇಟು ನೀಡಿದರು.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಸದಸ್ಯರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ವೇಣುಗೋಪಾಲ್ ಸರಣಿ ಸಭೆಗಳನ್ನು ನಡೆಸಿದರು. ರಾಜ್ಯ ಸರಕಾರದ ಕಾರ್ಯಕ್ರಮಗಳು, ಯೋಜನೆಗಳು, ಸಾಧನೆಗಳ ಕುರಿತು ಹೆಚ್ಚಿನ ಪ್ರಚಾರ ನೀಡುವ ಮೂಲಕ, ಸರಕಾರದ ಪರವಾಗಿ ಜನಾಭಿಪ್ರಾಯ ರೂಪಿಸುವಂತೆ ಕೆಪಿಸಿಸಿ ಮಾಧ್ಯಮ ವಿಭಾಗಕ್ಕೆ ಅವರು ಸೂಚನೆ ನೀಡಿದರು.
ಕೆಪಿಸಿಸಿ ಮಾಧ್ಯಮ ವಿಭಾಗ, ಸಾಮಾಜಿಕ ಜಾಲತಾಣ ಹಾಗೂ ಐಟಿ ವಿಭಾಗಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ನಡೆಸಿದ ವೇಣುಗೋಪಾಲ್, ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷದ ಪ್ರಚಾರ ವಿಭಾಗಗಳು ಮತ್ತಷ್ಟು ಸಕ್ರಿಯವಾಗಬೇಕು. ಸರಕಾರದ ಸಾಧನೆ ಹಾಗೂ ಪಕ್ಷದ ಕಾರ್ಯಕ್ರಮಗಳು ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ತಲುಪುವಂತಾಗಬೇಕು ಎಂದು ಸಲಹೆ, ಸೂಚನೆಗಳನ್ನು ನೀಡಿದರು.
ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ನೀಡುವ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಆರೋಪಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ಪ್ರತ್ಯುತ್ತರ ನೀಡಬೇಕು. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮ ವಿಭಾಗ ಈ ನಿಟ್ಟಿನಲ್ಲಿ ಸಕ್ರಿಯವಾಗಿರಬೇಕು ಎಂದರು.
ಕೇಂದ್ರ ಸರಕಾರವು 500 ಹಾಗೂ 1 ಸಾವಿರ ರೂ.ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ್ದು ಹಾಗೂ ಜಿಎಸ್‌ಟಿಯನ್ನು ಪರಿಣಾಮಕಾರಿ ಜಾರಿಗೊಳಿಸದೆ ಇದ್ದ ಕಾರಣ ಸಾರ್ವಜನಿಕರು ಹಾಗೂ ಸಣ್ಣ ಉದ್ಯಮಿಗಳ ಮೇಲೆ ಬೀರಿರುವ ದುಷ್ಪರಿಣಾಮ, ಜಿಡಿಪಿ ಕುಸಿತವಾಗಿರುವುದು ಸೇರಿದಂತೆ ಕೇಂದ್ರ ಸರಕಾರದ ವೈಫಲ್ಯಗಳನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಿಕೊಡಬೇಕು ಎಂದು ವೇಣುಗೋಪಾಲ್ ಸಭೆಯಲ್ಲಿ ಸೂಚನೆ ನೀಡಿದರು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್‌ಗುಂಡೂರಾವ್, ಸಚಿವರು, ಶಾಸಕರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.