×
Ad

ಸಾಮಾಜಿಕ ಜಾಲತಾಣಗಳ ಸದ್ಬಳಕೆಗೆ ಪರಮೇಶ್ವರ್ ಸೂಚನೆ

Update: 2017-09-17 20:11 IST

ಬೆಂಗಳೂರು, ಸೆ.17: ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನಮಾನಸಕ್ಕೆ ತಿಳಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಪರಮೇಶ್ವರ್ ಪತ್ರ ಬರೆದಿದ್ದಾರೆ.

ಈ ಕೂಡಲೇ ಎಲ್ಲರೂ ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್ ಗ್ರೂಪ್, ಇಮೇಲ್ ಖಾತೆಗಳನ್ನು ತೆರೆಯದೆ ಇರುವವರು ತಮ್ಮ ತಮ್ಮ ಖಾತೆಗಳನ್ನು ತೆರೆಯಬೇಕು ಎಂದು ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಬೂತ್‌ಮಟ್ಟದಿಂದ ಹಿಡಿದು ಪ್ರದೇಶ ಕಾಂಗ್ರೆಸ್ ಸಮಿತಿಯವರೆಗೆ ಯುವ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಅಂಗ ಸಂಸ್ಥೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯಾದ್ಯಂತ ಕಾಂಗ್ರೆಸ್ ಪರವಾಗಿ ಮತದಾರರ ಒಲವನ್ನು ಗಳಿಸುವಂತೆ ಅವರು ಸೂಚಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಲ್ಲದೆ, ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸುವಂತೆ ತಾವೆಲ್ಲರೂ ಸಮರೋಪಾದಿಯಲ್ಲಿ ಕಾರ್ಯೋನ್ಮುಖರಾಗಬೇಕು. ಪ್ರತೀ ಪಕ್ಷಗಳು ನಮ್ಮ ಪಕ್ಷದ ಹಾಗೂ ನಾಯಕರ ಬಗ್ಗೆ ಅಪಪ್ರಚಾರ ಮಾಡಿದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕವೇ ಉತ್ತರವನ್ನು ಕೊಡಬೇಕು ಎಂದು ಪರಮೇಶ್ವರ್ ಸಲಹೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳು ಬಹುಬೇಗ ಜನರಿಗೆ ತಲುಪುವ ಸಂವಹನ ಕೇಂದ್ರಗಳಾಗಿವೆ. ಯುವ ಜನತೆಯ ಹಾಗೂ ಬಹುತೇಕ ಎಲ್ಲರ ಕೈಯಲ್ಲಿ ಮೊಬೈಲ್‌ಗಳಿರುವುದರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಳು, ನಮ್ಮ ಸರಕಾರದ ಸಾಧನೆಗಳು, 2013ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಗಳು ಹಾಗೂ ಅವುಗಳ ಅನುಷ್ಠಾನಗಳನ್ನು ಬೂತ್‌ಮಟ್ಟದ ಮತದಾರರವರೆಗೆ ಶೀಘ್ರವಾಗಿ ತಲುಪಿಸಬೇಕು ಎಂದು ಅವರು ಹೇಳಿದ್ದಾರೆ.

ಇದಕ್ಕಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ತಂಡವನ್ನು ರಚನೆ ಮಾಡಿ, ಕಾರ್ಯೋನ್ಮುಖರಾಗಿ ಹೆಚ್ಚು ಜನರಿಗೆ ಇನ್ನಷ್ಟು ಹತ್ತಿರವಾಗಿ ಕಾಂಗ್ರೆಸ್ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದರ ಜೊತೆಗೆ ವಿರೋಧ ಪಕ್ಷಗಳ ಅಪಪ್ರಚಾರವನ್ನು ತಡೆಗಟ್ಟಬೇಕು ಎಂದು ಪರಮೇಶ್ವರ್ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News