×
Ad

ಉತ್ತರ ಕರ್ನಾಟಕದಿಂದ ಸಿಎಂ ಸ್ಪರ್ಧೆಗೆ ಮನವಿ: ರಮೇಶ್ ಜಾರಕಿಹೊಳಿ

Update: 2017-09-17 23:49 IST

ಬಾಗಲಕೋಟೆ, ಸೆ.17: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಕಣಕ್ಕಿಳಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದೇವೆ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಅಥಣಿ, ಗೋಕಾಕ್ ಅಥವಾ ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗಿದೆ ಎಂದರು.

ಆದರೆ, ಈ ಬಗ್ಗೆ ಅವರು ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ. ಉತ್ತರ ಕರ್ನಾಟಕ ಭಾಗದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ, ಪಕ್ಷಕ್ಕೆ ಹೆಚ್ಚಿನ ಅನುಕೂಲ ವಾಗಲಿದೆ ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅಲ್ಲ, ಪ್ರಧಾನಮಂತ್ರಿ ನರೇಂದ್ರಮೋದಿ ಬಂದು ಸ್ಪರ್ಧಿಸಿದರೂ ಕಾಂಗ್ರೆಸ್ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು.

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ನಿಂತರೂ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಇದು ಉತ್ತರ ಕರ್ನಾಟಕದ ಕಾರ್ಯಕರ್ತರ ಆಶಯವು ಆಗಿದೆ ಎಂದರು.

ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ಚುನಾವಣೆ ಎದುರಿಸಲು ಸಾಧ್ಯವಾಗುತ್ತಿಲ್ಲ. ಸೋಲಿನ ಭಯದಿಂದ ಈಗ ಉತ್ತರ ಕರ್ನಾಟಕದ ಕಡೆಗೆ ಮುಖ ಮಾಡುತ್ತಿದ್ದಾರೆ. ಯಡಿಯೂರಪ್ಪ ಈ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸಿದರೆ ಕಾಂಗ್ರೆಸ್‌ಗೆ ಯಾವುದೆ ಹಿನ್ನಡೆಯಾಗುವುದಿಲ್ಲ. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದರೂ ಏನು ಮಾಡಲು ಸಾಧ್ಯವಿಲ್ಲ ಎಂದು ತಿಮ್ಮಾಪುರ್ ತಿರುಗೇಟು ನೀಡಿದರು.

ರಾಜ್ಯದಲ್ಲಿ ನಕಲಿ ಮಧ್ಯ ಮಾರಾಟ ಸೇರಿದಂತೆ ಮಾದಕ ವಸ್ತುಗಳ ಮಾಫಿಯಾ ತೀವ್ರಗೊಂಡಿದೆ. ಇದಕ್ಕೆಲ್ಲ ಕಡಿವಾಣ ಹಾಕಲು ರಾಜ್ಯ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಮ್ಮಾಪುರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News