9 ಮಂದಿಯ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ಬೆಂಗಳೂರು, ಸೆ.20: ಕಳೆದ ಜೂನ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಒಂಬತ್ತು ಮಂದಿ ಆರೋಪಿಗಳ ವಿರುದ್ಧ ಬಂಟ್ವಾಳ ಪೊಲಿಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಬಂಟ್ವಾಳ ಟೌನ್ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತದರ ಮುಂದಿನ ಕಾನೂನು ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಇಸ್ಮಾಯೀಲ್ ಇಸಾಕ್ ಸೇರಿದಂತೆ ಒಂಬತ್ತು ಮಂದಿ ಆರೋಪಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಕಳೆದ ಜೂನ್ 13ರ ಸಂಜೆ 5.30ಕ್ಕೆ ಕಲ್ಲಡ್ಕದಲ್ಲಿ ಕಲ್ಲುತೂರಾಟ ನಡೆದಿತ್ತು. ಈ ವೇಳೆ ಹಲವಾರು ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಬಂಟ್ವಾಳ ಟೌನ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಬಂಧಿತರನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರು, ಪ್ರಕರಣದಲ್ಲಿ ತಮ್ಮದೇನು ಪಾತ್ರವಿಲ್ಲ, ಪೊಲೀಸರು ದುರುದ್ದೇಶದಿಂದ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿದ್ದಾರೆ. ಆದ್ದರಿಂದ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು.