ಬಿಎಸ್‌ವೈ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.20: ಡಾ.ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ.
ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಅರ್ಜಿದಾರ ಮತ್ತು ಪ್ರತಿವಾದಿಗಳ ವಾದ ಪ್ರತಿವಾದ ಆಲಿಕೆಯನ್ನು ಪೂರ್ಣಗೊಳಿಸಿದೆ. ಸೆ.21ರ ಗುರುವಾರ ಈ ಕುರಿತಂತೆ ಆದೇಶ ನೀಡಲಿದೆ.
ಎಸಿಬಿ ಪರ ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಹಾಗೂ ಬಿ.ಎಸ್.ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ.
ಡಾ.ಶಿವರಾಮ ಕಾರಂತ ಬಡಾವಣೆಯ 257 ಎಕರೆ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿತ್ತು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯಲ್ಲಿ 20 ವಿವಿಧ ಆದೇಶಗಳನ್ನು ಹೊರಡಿಸಿ 250 ಎಕರೆ ಜಮೀನು ಡಿನೋಟಿಫಿಕೇಷನ್‌ಗೆ ಆದೇಶಿಸಿದ್ದರು ಎಂದು ಡಾ.ಅಯ್ಯಪ್ಪ ದೂರು ಸಲ್ಲಿಸಿದ್ದರು.