ಕೆಎಸ್ಸಾಟಿಸಿ: ದಸರಾ ಪ್ರಯುಕ್ತ 1500 ವಿಶೇಷ ಬಸ್
ಬೆಂಗಳೂರು, ಸೆ.23: ದಸರಾ ಹಬ್ಬದ ಪ್ರಯುಕ್ತ ಕೆಎಸ್ಸಾರ್ಟಿಸಿ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆ.28 ರಿಂದ ಅ.2 ರವರೆಗೆ ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ 1500 ಕ್ಕೂ ಹೆಚ್ಚು ಬಸ್‌ಗಳ ವಿಶೇ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ವತಿಯಿಂದ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಸಾಮಾನ್ಯ, ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ, ಐರಾವತ ಕ್ಲಬ್ ಕ್ಲಾಸ್ ಹಾಗೂ ಡೈಮಂಡ್ ಕ್ಲಾಸ್ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 130 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರುತ್ತದೆ. ಇದಲ್ಲದೆ, ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಮುಂಬೈ, ಎರ್ನಾಕುಲಂ, ಪಾಲ್ಗಾಟ್, ತಿರುವನಂತಪುರ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ವಿಶೇಷ ಗಮನ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕೆಎಸ್ಸಾರ್ಟಿಸಿ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಎಂ-ಬುಕ್ಕಿಂಗ್‌ನ್ನು ಮೊಬೈಲ್ ಮೂಲಕ ಹಾಗೂ ಇ-ಟಿಕೇಟ್ ಬುಕ್ಕಿಂಗ್‌ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.