ಅಭಿವೃದ್ಧಿಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ದಿನೇಶ್ ಗುಂಡೂರಾವ್
ಮಂಗಳೂರು, ಸೆ. 25: ಅಭಿವೃದ್ಧಿಯಲ್ಲಿ ದೇಶಕ್ಕೆ ಗುಜರಾತ್ ಮಾದರಿಯಲ್ಲ. ಕರ್ನಾಟಕ ಮಾದರಿಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ, ಹಾಗೂ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಜಂಟಿ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶನ್ನುದ್ದೇಶಿಸಿ ಅವರು ಮಾತನಾಡಿದರು.
ಅಭಿವೃದ್ಧಿಯಲ್ಲಿ ದೇಶದಲ್ಲೇ ಕರ್ನಾಟಕ ಮುಂದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಿಂತರೂ ಹೆಚ್ಚಿನ ಯೋಜನೆಗಳನ್ನು ಸರಕಾರ ಜನತೆಗೆ ನೀಡಿದೆ. ರೈತರ ಸಾಲ ಮನ್ನಾ, ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ, ಬಡವರಿಗೆ ಕೆ.ಜಿ.ಗೆ ಒಂದು ರೂ.ನಲ್ಲಿ ಅಕ್ಕಿ, ಕೃಷಿ, ಶಿಕ್ಷಣ ಮೊದಲಾದ ಕ್ಷೇತ್ರಗಳಿಗೆ ಅನುದಾನ ನೀಡುವ ರಾಜ್ಯದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಎಂದರು.
ಕಳೆದ ಮೂರೂವರೆ ವರ್ಷಗಳಿಂದ ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಜನತೆಗೆ ನೀಡಿರುವ ಪ್ರಣಾಳಿಕೆಯಂತೆ ಬೇಡಿಕೆ ಈಡೇರಿಸಿಲ್ಲ. ದೇಶದ ಆರ್ಥಿಕತೆ ಹದಗೆಟ್ಟಿದೆ. ಉದ್ಯೋಗ ಸೃಷ್ಟಿಯಾಗಿಲ್ಲ. ನೋಟ್ ನಿಷೇಧದಿಂದ ಸಾಮಾನ್ಯ ಜನರು ತೊಂದರೆಯನ್ನು ಅನುಭವಿಸಿದ್ದಾರೆ. ದೇಶದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ದಲಿತರ ಸಹಿತ ಅಲ್ಪಸಂಖ್ಯಾತರ ಮೇಲೆ ಹಲ್ಲೆಗಳು ಮುಂದುವರಿದಿವೆ. ಅಭಿವೃದ್ಧಿಯೇ ಮಂತ್ರ ಎಂದು ಹೇಳುವ ಬಿಜೆಪಿರು ಕಳೆದ ಮೂರುವರೆ ವರ್ಷಗಳಲ್ಲಿ ಏನು ಸಾಧನೆ ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.
ಬಿಜೆಪಿಯಿಂದ ಗೊಂದಲ ಸೃಷ್ಟಿ
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗರಿಗೆ ವಿಷಯ ಸಿಗುತ್ತಿಲ್ಲ. ಆದ್ದರಿಂದ ಅವರು ಜನರಲ್ಲಿ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿಲ್ಲ. ಯಾವುದೇ ಹಗರಣಗಳಲ್ಲಿ ಸಿಲುಕಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ಧರ್ಮ ಮತ್ತು ಸತ್ಯದ ಬಗ್ಗೆ ಮಾತನಾಡುವ ಬಿಜೆಪಿ ನುಡಿಯುವುದೇ ಅಸತ್ಯ. ಮಾಡುವುದೇ ಅಧರ್ಮ ಎಂದು ಟೀಕಿಸಿದರು.