ಸ್ವಾತಂತ್ರಕ್ಕಾಗಿ ಹೋರಾಡಿದ ಇತಿಹಾಸ ಕಾಂಗ್ರೆಸ್‌ಗಿದೆ: ಸುಬ್ಬಾರೆಡ್ಡಿ

Update: 2017-09-25 18:06 GMT

ಬಾಗೇಪಲ್ಲಿ, ಸೆ.24: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಒಂದು ರಾಜಕೀಯ ಪಕ್ಷ ಮಾತ್ರವಲ್ಲ, ಅದು ನಿರಂತರವಾದ ಜನಾಂದೋಲನವಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಪಟ್ಟಣದ 12ನೆ ವಾರ್ಡ್‌ನಲ್ಲಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಏರ್ಪಡಿಸಿದ್ದ ನಾಯಕರಿಂದ ನಾಗರಿಕರತ್ತ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದ ಮತ್ತು ಸ್ವಾತಂತ್ರ್ಯ ನಂತದ ದಿನಗಳಲ್ಲಿ ಹಲವು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿ ಭಾರತಕ್ಕೆ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಹಾಕಿಕೊಟ್ಟ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಕಾಂಗ್ರೆಸ್ ಪಕ್ಷದ ನಾಯಕರು ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ್ದಾರೆ. ಬೇರೆ ಯಾವ ಪಕ್ಷಗಳ ಮುಖಂಡರು ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಉದಾಹರಣೆಗಳು ಇಲ್ಲ, ಆದ್ದರಿಂದ 2018ರ ವಿಧಾನಸಭೆ ಚುನಾವಣೆಯಲ್ಲಿಯೂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬಹುಮತ ನೀಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ 4 ವರ್ಷಗಳ ಅಧಿಕಾರವದಿಯಲ್ಲಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆದರೆ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಅಧಿಕಾರಕ್ಕೆ ಬರುವ ಮುಂಚೆ ಚುನಾವಣಾ ಪ್ರನಾಳಿಕೆಯಲ್ಲಿ ಕಪ್ಪುಹಣವನ್ನು ತಂದು ದೇಶದ ಪ್ರತಿಯೊಬ್ಬ ಪ್ರಜೆಯ ಬ್ಯಾಂಕ್ ಖಾತೆಗೆ ತಲಾ 15ಲಕ್ಷ ರೂ. ಜಮೆ ಮಾಡುವುದಾಗಿ ಕಂಡ ಕಂಡಲ್ಲಿ ಹೇಳಿದ್ದರು. ಆದರೆ ಈ ಭರವಸೆ ಹುಸಿಯಾಗಿದ್ದು, ಇದರ ಬದಲಿಗೆ ಕಪ್ಪುಹಣ ಇಟ್ಟುಕೊಂಡವರು ವಿದೇಶಕ್ಕೆ ಓಡಿಹೋಗಲು ಬಿಜೆಪಿ ಸರಕಾರ ದಾರಿ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ನರಸಿಂಹಪ್ಪ,ಪುರಸಭೆ ಅಧ್ಯಕ್ಷೆ ಮಮತಾ ನಾಗರಾಜರೆಡ್ಡಿ, ತಾಪಂ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಪುರಸಭೆ ಸದಸ್ಯರಾದ ಆ.ನ.ಮೂರ್ತಿ, ನಲ್ಲಪ್ಪ, ಭಾಸ್ಕರ್, ವೇಣು ಮತ್ತಿತರರು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News