ನೆ.ಲ.ನರೇಂದ್ರಬಾಬು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
ಬೆಂಗಳೂರು, ಸೆ. 27: ಪಕ್ಷ ನನ್ನನ್ನು ನಿರ್ಲಕ್ಷಿಸಿದ್ದರಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2013 ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತ ನಂತರ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಪಕ್ಷ ನನ್ನ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಅಲ್ಲದೆ, ಪ್ರಾಮಾಣಿಕ, ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಬೆಲೆ ಇಲ್ಲದಂತಾಗಿದೆ. ಇದರಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ಸಲ್ಲಸಿದ್ದೇನೆ ಎಂದು ಹೇಳಿದರು.
ಹಿಂದಿನ ಚುನಾವಣೆಯಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಾನು ಗೆಲ್ಲಬಾರದು ಎಂಬ ದುರುದ್ದೇಶದಿಂದ ಬೇರೆಯವರೊಂದಿಗೆ ಶಾಮೀಲಾಗಿ, ಅಂದು ನನ್ನ ಸೋಲಿಗೆ ಕಾರಣಕರ್ತರಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಒಳ ಒಪ್ಪಂದದಿಂದಾಗಿ ನಾನು ನನ್ನ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ನೀಡಬೇಕಾದ ನ್ಯಾಯ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದರು.
ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಬೆಳವಣಿಗೆ ಸಹಿಸದೇ ಕಾಂಗ್ರೆಸ್‌ನ ಕೆಲವು ನಾಯಕರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದ ಅವರು, ಮೂರು ಬಾರಿ ಪಾಲಿಕೆ ಸದಸ್ಯನಾಗಿ, ಎರಡು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ನನ್ನಂತಹ ಒಬ್ಬ ಕಾರ್ಯಕರ್ತನ ವಿರುದ್ಧ ಈ ರೀತಿಯ ಷಡ್ಯಂತರ ಮಾಡುವುದು ನಷ್ಟವೇ ಹೊರತು ಲಾಭವಲ್ಲ. ಹೀಗಾಗಿ, ಕೂಡಲೇ ಪಕ್ಷ ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಇನ್ನಷ್ಟು ಜನರು ಪಕ್ಷ ತೊರೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ನಾನು ಶಾಸಕನಾಗಿದ್ದ ವೇಳೆ ಬಿಜೆಪಿಯವರ ಆಪರೇಷನ್ ಕಮಲಕ್ಕೆ ಬಲಿಯಾಗದೇ ಪಕ್ಷವನ್ನು ಆಡಳಿತಕ್ಕೆ ತರಬೇಕು ಎಂದು ಪ್ರಾಮಾಣಿಕವಾಗಿ ಕೆಲಸ ಮಾಡಿದವರಲ್ಲಿ ನಾನು ಒಬ್ಬ. ಆದರೆ, ಚುನಾವಣೆಯಲ್ಲಿ ನಾನು ಸೋತ ನಂತರ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೇಕಾದ ಶಕ್ತಿ ಹಾಗೂ ಬೆಂಬಲವನ್ನು ಕಾಂಗ್ರೆಸ್ ಪಕ್ಷ ನೀಡಲಿಲ್ಲ ಎಂದು ಆರೋಪಿಸಿದರು.