×
Ad

ಬನಾರಸ್ ವಿವಿ ಹಿಂಸಾಚಾರ ಖಂಡಿಸಿ ಎನ್‌ಎಸ್‌ಯುಐ ಕಾರ್ಯಕರ್ತರಿಂದ ಪ್ರತಿಭಟನೆ

Update: 2017-09-27 22:26 IST

ಬೆಂಗಳೂರು, ಸೆ.27: ಉತ್ತರ ಪ್ರದೇಶದ ಬನಾರಸ್ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರು ಹಾಗೂ ಪತ್ರಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದನ್ನು ಖಂಡಿಸಿ ಎನ್‌ಎಸ್‌ಯುಐ ಇಬ್ಬರು ಕಾರ್ಯಕರ್ತರು ಕೇಶ ಮುಂಡನೆ ಮಾಡಿಸಿಕೊಳ್ಳುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಬುಧವಾರ ಆನಂದ್‌ರಾವ್ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಅವರು, ಬನಾರಸ್ ವಿವಿಯಲ್ಲಿ ವಿದ್ಯಾರ್ಥಿಗಳನ್ನು ಚುಡಾಯಿಸುತ್ತಿರುವ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ವಿವಿ ಆಡಳಿತ ಮಂಡಳಿ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
                 
ಪ್ರತಿಭಟನೆಯ ವಿರುದ್ಧ ವರದಿ ಮಾಡಲು ಬಂದಿದ್ದ ಪತ್ರಕರ್ತರ ಮೇಲೂ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ಉತ್ತರ ಪ್ರದೇಶ ಸರಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ವಿದ್ಯಾರ್ಥಿಗಳನ್ನು ಚುಡಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಪೊಲೀಸರು ವಿದ್ಯಾರ್ಥಿಗಳ ಮೇಲೆಯೇ ಲಾಠಿ ಪ್ರಹಾರ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯ ಮಾಡಿದ್ದಾರೆ. ಆದರೆ, ಅವರದೇ ಸರಕಾರವಿರುವ ಉತ್ತರಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆಕೊಡುವ ಬದಲು ಲಾಠಿ ಏಟನ್ನು ನೀಡುತ್ತಿದ್ದಾರೆ. ಪ್ರಧಾನಿಗಳು ಬರಿ ಘೋಷಣೆಗೆ ಮಾತ್ರ ಸೀಮಿತವಾಗಿದ್ದು, ಅವರ ಎಲ್ಲ ಘೋಷಣೆಗಳು ಕೇವಲ ಪ್ರಚಾರಕ್ಕಾಗಿ ಮಾಡುತ್ತಿರುವುದು ಎಂದು ಜನತೆಗೂ ಈಗಾಲೇ ಅರ್ಥವಾಗಿದೆ ಎಂದು ಹೇಳಿದರು.

ಪ್ರಧಾನ ಮಂತ್ರಿಗಳು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಮಕ್ಕಳು ಸತ್ತಾಗಲೂ ಯಾವುದೇ ಹೇಳಿಕೆ ನೀಡಲಿಲ್ಲ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದರೂ ಯಾವುದೇ ಪ್ರತಿಕ್ರಿಯೆ ನೀಡಲ್ಲ ಹಾಗೂ ಉತ್ತರ ಪ್ರದೇಶದ ಸರಕಾರಕ್ಕೆ ಯಾವುದೇ ಸೂಚನೆ ನೀಡಲ್ಲ. ಇದು ಇವರ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಎಂದು ಪ್ರಶ್ನಿಸಿದರು.

ಎನ್‌ಎಸ್‌ಯುಐ ಕಾರ್ಯಕರ್ತರ ಕೂದಲುಗಳನ್ನು(ಕೇಶ ಮುಂಡನೆ) ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಸಿಎಂಗೆ ಕೋರಿಯರ್ ಮೂಲಕ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಮುಖಂಡರಾದ ಕೀರ್ತಿ ಗಣೇಶ್, ಶ್ರೀಧರ್, ಪ್ರಖ್ಯಾತ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News