ಪ್ರಿಯಾಂಕಾ ಗಾಂಧಿ ಆಗಮನದ ಮಾಹಿತಿಯಿಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರು, ಸೆ.28: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಸ್ಟಾರ್ ಪ್ರಚಾರಕಿಯಾಗಿ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿರುವ ಬಗ್ಗೆ ತನಗೆ ಮಾಹಿತಿ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ವಿಜಯದಶಮಿ ಅಂಗವಾಗಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನು ಎಐಸಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಬಗ್ಗೆಯೂ ನನಗೆ ಮಾಹಿತಿಯಿಲ್ಲ. ಇವೆಲ್ಲ ಎಐಸಿಸಿ ಮಟ್ಟದಲ್ಲಿ ನಿರ್ಧಾರವಾಗುವ ವಿಚಾರಗಳು ಎಂದು ಹೇಳಿದರು.
ಎಐಸಿಸಿಯ ಮಹಾ ಅಧಿವೇಶನವನ್ನು ರಾಜ್ಯದಲ್ಲಿ ನಡೆಸಲು ನಾವು ಉತ್ಸುಕರಾಗಿದ್ದೇವೆ. ಅಂತಹ ಅವಕಾಶವನ್ನು ಹೈಕಮಾಂಡ್ ನೀಡಿದರೆ ನಾವು ಮಹಾ ಅಧಿವೇಶನಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸಿದ್ಧರಿದ್ದೇವೆ ಎಂದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಸಂಪತ್ ರಾಜ್ ಹಾಗೂ ಉಪಮೇಯರ್ ಆಗಿರುವ ಜೆಡಿಎಸ್‌ನ ಪದ್ಮಾವತಿ ನರಸಿಂಹ ಮೂರ್ತಿಗೆ ಅಭಿನಂದನೆ ಸಲ್ಲಿಸಿದ ಪರಮೇಶ್ವರ್, ನಗರದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುವಂತೆ ಮನವಿ ಮಾಡಿದರು.