×
Ad

​ಪ್ರತ್ಯೇಕ ಪೋಕ್ಸೊ ಕಾಯ್ದೆ: ಆರೋಪಿಗಳ ಜಾಮೀನು ತಿರಸ್ಕೃತ

Update: 2017-09-28 21:46 IST

ಉಡುಪಿ, ಸೆ.28: ಪ್ರತ್ಯೇಕ ಪೋಕ್ಸೊ ಕಾಯಿದೆಯಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯ ಇಂದು ತಿರಸ್ಕರಿಸಿದೆ.

ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ಸಿದ್ಧಾಪುರ ಐರ್‌ಬೈಲು ನಿವಾಸಿ ಶ್ರೀನಿ ವಾಸ ಜೋಶಿ(59) ಎಂಬವರು ಏಳು ವಿದ್ಯಾರ್ಥಿಗಳ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದು, ಈ ಬಗ್ಗೆ ಸೆ.18ರಂದು ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಸೆ.22ರಂದು ಜಾಮೀನು ನೀಡುವಂತೆ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಶ್ರೀನಿವಾಸ ಜೋಶಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದರು.

ಉಡುಪಿ ಕಡೆಕಾರಿನ ಅನಿಲ್ ಕಾಂಚನ್(24) ಎಂಬಾತ ಸೆ.18ರಂದು ಅಪ್ರಾಪ್ತ ವಯಸ್ಸಿನ ಉಡುಪಿಯ ಶಾಲಾ ವಿದ್ಯಾರ್ಥಿನಿಯ ಮೇಲೆ ಹಿರಿಯಡ್ಕ ಲಾಡ್ಜ್‌ವೊಂದರಲ್ಲಿ ಅತ್ಯಾಚಾರ ಎಸಗಿದ್ದನು. ಅದೇ ದಿನ ವಿದ್ಯಾರ್ಥಿನಿ ಈ ಕುರಿತು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಆತನ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಜಾಮೀನು ನೀಡುವಂತೆ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು. ಆದರೆ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಅನಿಲ್ ಕಾಂಚನ್‌ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದರು. ಈ ಎರಡು ಪ್ರಕರಣಗಳಲ್ಲಿ ಸರಕಾರದ ಪರವಾಗಿ ಜಿಲ್ಲಾ ವಿಶೇಷ ಅಭಿಯೋಜಕ ವಿಜಯ ವಾಸು ಪೂಜಾರಿ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News