ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ಬಂಧನ
ಮಂಗಳೂರು, ಸೆ.21: ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಿಂಜಾವೇ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ 'ವಾರ್ತಾಭಾರತಿ'ಗೆ ಖಚಿತಪಡಿಸಿದ್ದಾರೆ.
ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿ, ಬೆದರಿಕೆ ಒಡ್ಡಿದ ಆರೋಪದಲ್ಲಿ ಹಿಂಜಾವೇ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿತ್ತು.
ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಕಾರಂತ್, ಗ್ರಾಮಾಂತರ ಠಾಣಾ ಎಸ್ಸೈ ಅಬ್ದುಲ್ ಖಾದರ್, ಎಎಸ್ಸೈ ರುಕ್ಮಾ ಹಾಗೂ ಚಂದ್ರ ಹಿಂದೂ ನಾಯಕರನ್ನು ದಮನಿಸುವ ಕೃತ್ಯವನ್ನು ಮಾಡುತ್ತಿದ್ದಾರೆ. ಎಸ್ಸೈ ಖಾದರ್ ತಲೆಯನ್ನು ಬೋಳಿಸಿ ಪುತ್ತೂರು ಬಸ್ ನಿಲ್ದಾಣದಲ್ಲಿ ಕತ್ತೆಯ ಮೇಲೆ ಕೂರಿಸಿ ಬೆತ್ತಲೆ ಮೆರವಣಿಗೆ ಯಾಕೆ ಮಾಡಬಾರದು ಎಂದು ಹೇಳಿದ್ದರು. ಪೊಲೀಸರ ಕೃತ್ಯ ಇದೇ ರೀತಿ ಮುಂದುವರಿದಲ್ಲಿ ಪುತ್ತೂರನ್ನು ಹಳೆಯ ಸುರತ್ಕಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು.