ಹೆಣ್ಣು ಮಕ್ಕಳ ರಕ್ಷಣೆಗೆ ಸಿಸಿಟಿವಿ ಕ್ಯಾಮರಾ ಅಳವಡಿಕೆ: ಸಚಿವ ರಾಮಲಿಂಗಾರೆಡ್ಡಿ

Update: 2017-10-01 14:16 GMT

ಬೆಂಗಳೂರು, ಅ.1: ಬೆಂಗಳೂರು ನಗರದ ಹೆಣ್ಣು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮತ್ತು ಅಪರಾಧ ಕೃತ್ಯಗಳ ನಿಯಂತ್ರಣಕ್ಕಾಗಿ ಪ್ರತೀ ವಾರ್ಡ್‌ನಲ್ಲಿಯೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ರವಿವಾರ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಬಿಬಿಎಂಪಿ ನೂತನ ಮೇಯರ್ ಸಂಪತ್ ರಾಜ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಸಿಸಿಟಿವಿ ಕ್ಯಾಮರಾ ಅಳವಡಿಸುವ ಸಂಬಂಧ ಶೀಘ್ರದಲ್ಲೇ ನಗರ ಪೊಲೀಸ್ ಆಯುಕ್ತ, ಮೇಯರ್, ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದರು.

ಮಳೆ ಹಿನ್ನೆಲೆಯಲ್ಲಿ ಹಾನಿಗೀಡಾದ ಪ್ರದೇಶಕ್ಕೆ ಬಿಬಿಎಂಪಿ ಮೇಯರ್ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ನಗರದಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಯಾಗಿರುವ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಬಳಿಕ ಮೇಯರ್ ಸಂಪತ್ ರಾಜ್ ಮಾತನಾಡಿ, ವಿಜಯದಶಮಿ ಮತ್ತು ದಸರಾ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಕಸದ ಪ್ರಮಾಣ ಹೆಚ್ಚಾಗಿದೆ. ಅದನ್ನು ಶೀಘ್ರ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಇನ್ನು ಮುಂದೆ ಅಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕವಿಕಾ ಅಧ್ಯಕ್ಷ ಎಸ್.ಮನೋಹರ್, ಮುಖಂಡರಾದ ಜಿ. ಜನಾರ್ದನ್, ಎಂ.ಎ.ಸಲೀಂ, ಶೇಖರ್, ಹೇಮರಾಜ್, ಲಕ್ಷ್ಮೀ ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News