2002ರ ಗುಜರಾತ್ ಗಲಭೆ: ಝಾಕಿಯಾ ಜಾಫ್ರಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Update: 2017-10-05 07:54 GMT

ಹೊಸದಿಲ್ಲಿ, ಅ.5: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣದಲ್ಲಿ ಸಂಚು ನಡೆಸಿದ ಆರೋಪದಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಇತರರ ವಿರುದ್ಧ ಮತ್ತೊಮ್ಮೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ ನೀಡಬೇಕೆಂದು ಕೋರಿ ಝಾಕಿಯಾ ಜಾಫ್ರಿ ಸಲ್ಲಿಸಿರುವ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಜಾಫ್ರಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಟೀಸ್ತಾ ಸೆಟಲ್ವಾಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ‘‘ಕೋಮು ಗಲಭೆಯ ಹಿಂದೆ ದೊಡ್ಡ ಪಿತೂರಿ ಅಡಗಿರಲಿಲ್ಲ’’ ಎಂದು ತೀರ್ಪು ನೀಡಿದೆ.

ಪ್ರಕರಣವನ್ನು ವಿಶೇಷ ತನಿಖಾ ತಂಡದ(ಸಿಟ್) ತನಿಖೆಗೆ ಆದೇಶಿಸುವ ಅಧಿಕಾರ ತನಗಿಲ್ಲ ಎಂಬ ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಜಾಫ್ರಿಗೆ ಹೈಕೋರ್ಟ್ ಅವಕಾಶ ನೀಡಿದೆ. ಜಾಫ್ರಿ ಪತಿ, ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಲ್ಲಿ ಬಲಿಪಶುವಾಗಿದ್ದರು. ಸುಪ್ರೀಂಕೋರ್ಟಿನಿಂದ ನೇಮಿಸಲ್ಪಟ್ಟಿರುವ ವಿಶೇಷ ತನಿಖಾ ತಂಡ (ಸಿಟ್)2012ರಲ್ಲಿ ಮೋದಿ,ಇತರ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿತ್ತು. ಸಿಟ್ ವರದಿ ಪ್ರಶ್ನಿಸಿ ಜಾಫ್ರಿ ಅಹ್ಮದಾಬಾದ್‌ನ ಮೆಟ್ರೊಪಾಲಿಟಿಯನ್‌ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಫ್ರಿಯವರ ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News