ಪಕ್ಷಾಂತರಿ ಶಾಸಕರ ಮೇಲೆ ಕಣ್ಣಿಡಲು ಕೆಪಿಸಿಸಿಗೆ ಕೆ.ಸಿ.ವೇಣುಗೋಪಾಲ್ ಸೂಚನೆ

Update: 2017-10-08 15:07 GMT

ಬೆಂಗಳೂರು, ಅ.8: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಮಾಡಬಹುದಾದ ಶಾಸಕರ ಮೇಲೆ ಕಣ್ಣಿಟ್ಟು, ಅವರ ಕ್ಷೇತ್ರದಲ್ಲಿ ಪರ್ಯಾಯ ನಾಯಕತ್ವವನ್ನು ಬೆಳೆಸುವ ಸಂಬಂಧ ಗಮನ ಹರಿಸುವಂತೆ ಕೆಪಿಸಿಸಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದಾರೆ.

ಚುನಾವಣೆ ಸಮೀಪವಾಗುತ್ತಿದ್ದಂತೆ ಕಾಂಗ್ರೆಸ್‌ನ ಕೆಲ ಅತೃಪ್ತ ಶಾಸಕರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದತ್ತ ಮುಖ ಮಾಡುವ ಸಾಧ್ಯತೆಗಳಿವೆ. ಆದುದರಿಂದ, ಅಂತಹ ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡು, ಅವರ ಚಟುವಟಿಕೆಗಳ ಬಗ್ಗೆ ನಿಗಾವಹಿಸುವಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅನ್ಯ ಪಕ್ಷಗಳತ್ತ ಮುಖ ಮಾಡಿರುವ ಕೆಲ ಶಾಸಕರು, ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ತಮ್ಮ  ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಂದ ಸಿಕ್ಕಿದೆ. ಈ ಬಗ್ಗೆ ನೀವಿಬ್ಬರೂ ಸೂಕ್ತ ಗಮನ ಹರಿಸಬೇಕು ಎಂದು ವೇಣುಗೋಪಾಲ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣೆ ಹೊಸ್ತಿಲಿನಲ್ಲಿ ಶಾಸಕರು ಬೇರೆ ಪಕ್ಷಗಳಿಗೆ ಹೋದರೆ, ಅಂತಹ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿ ಲಭ್ಯವಾಗದೆ ಪಕ್ಷಕ್ಕೆ ಹಿನ್ನಡೆಯುಂಟಾಗಬಹುದು. ಆದುದರಿಂದ, ಅಂತಹ ಕ್ಷೇತ್ರಗಳಲ್ಲಿ ಪರ್ಯಾಯ ನಾಯಕರನ್ನು ಗುರುತಿಸಿ, ಬೆಳೆಸುವ ಕೆಲಸಕ್ಕೆ ಮುಂದಾಗಬೇಕಿದೆ ಎಂದು ವೇಣುಗೋಪಾಲ್ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಮುಖಂಡರಿಗೆ ಪಕ್ಷಾಂತರ ಮಾಡುಬಹುದಾದ ಶಾಸಕರ ಬಗ್ಗೆ ಮಾಹಿತಿ ಇರುತ್ತದೆ. ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಪಕ್ಷಾಂತರ ಪರ್ವಕ್ಕೆ ಸಿದ್ಧವಾಗಿರುವ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News