ನ.13ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ: ಸಚಿವ ಟಿ.ಬಿ.ಜಯಚಂದ್ರ
ಬೆಂಗಳೂರು, ಅ. 11: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನವೆಂಬರ್ 13ರಿಂದ 10 ದಿನಗಳ ಕಾಲ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದ ಸಂಪುಟ ಸಭಾ ಮಂದಿರದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನವು ನಡೆಸಲು ಸಂಪುಟ ತೀರ್ಮಾನಿಸಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಅರವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅ.25ರಿಂದ ಎರಡು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಹೊಸ ಆ್ಯಂಬುಲೆನ್ಸ್ ಖರೀದಿಗೆ ಸಮ್ಮತಿ: ಆರೋಗ್ಯ ಕವಚ ಯೋಜನೆಯ ಹಳೆಯ ಒಟ್ಟು 61.78 ಕೋಟಿ ರೂ.ವೆಚ್ಚದಲ್ಲಿ ಒಟ್ಟು 371 ಹೊಸ ಸುಸಜ್ಜಿತ ಆ್ಯಂಬುಲೆನ್ಸ್ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಜಯಚಂದ್ರ ಮಾಹಿತಿ ನೀಡಿದರು.
ಆ ಪೈಕಿ 95 ಆಧುನಿಕ ಜೀವ ರಕ್ಷಕ ವ್ಯವಸ್ಥೆ(ಅಡ್ವಾನ್ಸ್ ಲೈಫ್ ಸಪೋರ್ಟರ್ಸ್) ಮತ್ತು 276 ಮೂಲ ಜೀವ ರಕ್ಷಕ ವ್ಯವಸ್ಥೆ(ಬೇಸಿಕ್ ಲೈಫ್ ಸಪೋರ್ಟರ್ಸ್) ಆ್ಯಂಬುಲೆನ್ಸ್‌ಗಳನ್ನು ಖರೀದಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ವಿವರ ನೀಡಿದರು.
ತಜ್ಞ ವೈದ್ಯರ ನೇಮಕಕ್ಕೆ ಹೊಸ ಕೋರ್ಸ್: ಆರೋಗ್ಯ ಇಲಾಖೆಯಲ್ಲಿನ ತಜ್ಞ ವೈದ್ಯರ ಕೊರತೆ ನೀಗಿಸಲು ಸೇವಾನಿರತ ಸರಕಾರಿ ವೈದ್ಯರಿಗೆ ಬೆಂಗಳೂರಿನ ಕೆ.ಸಿ.ಜನರಲ್ ಮತ್ತು ಜಯನಗರ ಸಾರ್ವಜನಿಕ ಆಸ್ಪತ್ರೆ, ಬಾಗಲಕೋಟೆ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಕೋಲಾರ, ಕಲಬುರಗಿ, ತುಮಕೂರು, ವಿಜಯಪುರ ಸೇರಿದಂತೆ ರಾಜ್ಯದ 10 ಜಿಲ್ಲಾಸ್ಪತ್ರೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವೈದ್ಯಕೀಯ ಸೇವೆಗೆ ಅನುಕೂಲವಾಗುವ ಮೂರು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಇನ್ ನ್ಯಾಷನಲ್ ಬೋರ್ಡ್(ಡಿಎನ್‌ಬಿ)ಕೋರ್ಸ್ ಪ್ರಾರಂಭಿಸಲು ಒಪ್ಪಿಗೆ ನೀಡಿದೆ ಎಂದು ನುಡಿದರು.