×
Ad

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಆದ್ಯತೆ: ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ

Update: 2017-10-11 23:18 IST

ಮಡಿಕೇರಿ, ಅ.11: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡುವುದರ ಜೊತೆಗೆ ಅಲ್ಪಸಂಖ್ಯಾತರ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವುದು ಮತ್ತು ಅಲ್ಪಸಂಖ್ಯಾತರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಅಧಿಕಾರಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸಲಹೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಮಕ್ಕಳು ಸಾಮಾನ್ಯ ಶಿಕ್ಷಣ ಪಡೆಯುವಂತಾ ಗಬೇಕು. ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಹೇಳಿದರು. ಅಲ್ಪಸಂಖ್ಯಾತರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೋಬಳಿ ಮಟ್ಟದಲ್ಲಿ ಕಾರ್ಯಾಗಾರ ಏರ್ಪಡಿಸುವಂತೆ ಬಿಸಿಎಂ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ವಿವಿಧ ಇಲಾಖೆಗಳು ಅಲ್ಪಸಂಖ್ಯಾತರಿಗೆ ಮೀಸಲಿಟ್ಟಿರುವ ಅನುದಾನ ಖರ್ಚು ಮಾಡಬೇಕು. ಜೊತೆಗೆ ಸರಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಅವರು ಸಲಹೆ ಮಾಡಿದರು. ಜಿಪಂ ಉಪಕಾರ್ಯದರ್ಶಿ ಸಿದ್ಧಲಿಂಗಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಿ.ಎಂ.ದಾನೋಜಿ, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುಮ್ತಾಝ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ದೇವಕಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿದೇಶರ್ಕ ದರ್ಶನ್, ಸರ್ವ ಶಿಕ್ಷಣ ಅಭಿಯಾನದ ಸಹಾಯಕ ನಿರ್ದೇಶಕ ಎಂ.ಕೃಷ್ಣಪ್ಪ, ಪೊಲೀಸ್ ಇನ್‌ಸ್ಪೆಕ್ಟರ್ ಮೇದಪ್ಪ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಸಹಕಾರ ಇಲಾಖೆಯ ರವಿ ಕುಮಾರ್ ಅವರು ಹಲವು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News