×
Ad

'ಓಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿರುವ ಬಿಜೆಪಿ-ಕಾಂಗ್ರೆಸ್' : ಜೆಡಿಎಸ್ ಶಾಸಕಿ ಶಾರದಾ ಪೂರ್ಯನಾಯ್ಕ್ ಟೀಕೆ

Update: 2017-10-16 18:04 IST

ಶಿವಮೊಗ್ಗ, ಅ. 15: 'ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಓಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿವೆ. ಈ ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ದಿ ಸಾಧ್ಯವಿಲ್ಲವಾಗಿದೆ. ಇದರಿಂದ ಭ್ರಮನಿರಸನಗೊಂಡಿರುವ ರಾಜ್ಯದ ಮತದಾರರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ' ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕಿ ಶಾರದಾ ಪೂರ್ಯನಾಯ್ಕ್ ತಿಳಿಸಿದ್ದಾರೆ. 

ಸೋಮವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಅಲ್ಪಸಂಖ್ಯಾತರ ಘಟಕ ಆಯೋಜಿಸಿದ್ದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 

ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿಯವರು ಸಿಎಂ ಆಗಿದ್ದ ಅವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿವೆ. ಇದರಿಂದ ಮತ್ತೆ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸಿಎಂ ಆಗಿ ಮಾಡಲು ಮತದಾರರು ಉತ್ಸುಕತೆ ತೋರುತ್ತಿದ್ದಾರೆ. ಓಟ್ ಬ್ಯಾಂಕ್ ರಾಜಕಾರಣದಲ್ಲಿ ನಿರತವಾಗಿರುವ ಬಿಜೆಪಿ - ಕಾಂಗ್ರೆಸ್ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು. 

ಪಕ್ಷದ ಗ್ರಾಮಾಂತರ ವಿಭಾಗದ ಅಧ್ಯಕ್ಷ ಟಿ.ಬಿ.ಜಗದೀಶ್ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕಿ ಶಾರದಾ ಪೂರ್ಯನಾಯ್ಕ್ ಜಯ ಸಾಧಿಸುವುದು ನಿಶ್ಚಿತವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಅತ್ಯದಿಕ ಮತಗಳ ಅಂತರದಲ್ಲಿ ಅವರು ಆಯ್ಕೆಯಾಗಲಿದ್ದಾರೆ. ಶಾಸಕರಾಗಿ ಅವರು ಮಾಡಿರುವ ಅಭಿವೃದ್ದಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು. 

ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಮಹಮ್ಮದ್ ಯೂಸೂಫ್ (ಭಯ್ಯಾ) ರವರು ಮಾತನಾಡಿ, ಜಿಲ್ಲೆಯ ಎಲ್ಲ ಏಳು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಅತ್ಯದಿಕ ಮತಗಳ ಅಂತರದಲ್ಲಿ ಜಯ ಸಾಧಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ವಿಭಾಗದ ಕಾರ್ಯಕರ್ತರು ಕೆಲಸ ಮಾಡಬೇಕು. ಮತದಾರರ ಮನೆ ಬಾಗಿಲಿಗೆ ತೆರಳಿ ಜೆಡಿಎಸ್ ಪಕ್ಷದ ಪರವಾಗಿ ಮತಯಾಚನೆ ಮಾಡಬೇಕು ಎಂದರು. 

ಗ್ರಾಮಾಂತರ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನೂರುಲ್ಲಾ ಸಿರಿಗೆರೆಯವರು ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಪಕ್ಷದ ಸಂಘಟನೆ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯ ಸಾಧಿಸುವುದು ಖಚಿತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ಆಡಳಿತದಿಂದ ಮತದಾರರು ಬೇಸತ್ತಿದ್ದಾರೆ ಎಂದರು. 
ಸಮಾರಂಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ನಿರಂಜನ್, ಮುಖಂಡರಾದ ರಫೀಕ್, ಹುಸೇನ್‍ಖಾನ್, ಇಮ್ರಾನ್ ಖಾನ್, ಮಂಜಣ್ಣ, ಎ.ಬಿ.ಶಿವಣ್ಣ ಸೇರಿದಂತೆ ಮೊದಲಾದವರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News