×
Ad

ಮಕ್ಕಳ ಕ್ರೀಯಾಶೀಲತೆಗೆ ಪ್ರತಿಭಾ ಕಾರಂಜಿ ಸಹಕಾರಿ : ಶಶಿ ಸುಬ್ರಮಣಿ

Update: 2017-10-16 22:58 IST

ಮಡಿಕೇರಿ,ಅ.16 :ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲತೆ ಬೆಳೆಸಿಕೊಳ್ಳುವಂತೆ ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೂಕೊಂಡ ಶಶಿ ಸುಬ್ರಮಣಿ ಅವರು ಸಲಹೆ ಮಾಡಿದ್ದಾರೆ.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ವತಿಯಿಂದ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಂಗೀತ, ಸಾಹಿತ್ಯ, ಬರವಣಿಗೆ, ಕ್ರೀಡೆ ಹೀಗೆ ನಾನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು. 

ಕೊಡಗು ಜಿಲ್ಲೆ ಈ ಬಾರಿ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ 9ನೇ ಸ್ಥಾನ ಪಡೆದಿದ್ದು, 5 ನೇ ಸ್ಥಾನದೊಳಗೆ ಪಡೆಯಲು ಎಲ್ಲರೂ ಶ್ರಮಿಸಬೇಕಿದೆ ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.  

ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು ಶ್ರಮಿಸಬೇಕಿದೆ ಎಂದು ಶಶಿ ಸುಬ್ರಮಣಿ ಅವರು ಹೇಳಿದರು. ಶಾಲೆಗಳಲ್ಲಿ ಶುಚಿತ್ವ ಕಾಪಾಡಬೇಕು. ಉತ್ತಮ ಪರಿಸರ ಹೊಂದಿರಬೇಕು ಎಂದು ಅವರು ಸಲಹೆ ಮಾಡಿದರು. 

ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ ಎಂದು ಅವರು ಹೇಳಿದರು. 
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಡಿ.ಎಂ.ದಾನೋಜಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ತಮಗೆ ಆಸಕ್ತಿ ಇರುವ ಪ್ರತಿಭೆ ತೋರ್ಪಡಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಅವರು ಹೇಳಿದರು. 

ಸರ್ವ ಶಿಕ್ಷಣ ಅಭಿಯಾನ ಅಧಿಕಾರಿ ಭಾಗ್ಯಲಕ್ಷ್ಮಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಮಡಿಕೇರಿ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹಬೂಬ್ ಖಾನ್, ವಿಷಯ ಪರಿವೀಕ್ಷಕರಾದ ದೇವುನಾಯಕ್, ಸಾವಿತ್ರಿ, ಅನುದಾನಿತ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News