ಗೈಡ್‌ಲೈನ್ಸ್ ಪ್ರಕಾರ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2017-10-18 13:42 GMT

ಬೆಂಗಳೂರು, ಅ.17: ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿಯಾದರೂ ತಮ್ಮನ್ನು ಪರಿಗಣಿಸಬೇಕೆಂದು ಸಾಹಿತಿ ಬಿ.ವಿ.ಸತ್ಯನಾರಾಯಣರಾವ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ಅರ್ಜಿಯನ್ನು ಗೈಡ್‌ಲೈನ್ಸ್ ಪ್ರಕಾರ ಪರಿಗಣಿಸುವಂತೆ ಸರಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಶಂಕ್ರಪ್ಪ ಅವರು, ಸಾಹಿತಿ ಬಿ.ವಿ.ಸತ್ಯನಾರಾಯಣರಾವ್ ಅವರು ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಆದರೂ ಅವರಿಗೆ ಇಲ್ಲಿಯವರೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯೋತ್ಸವ ಪ್ರಶಸ್ತಿ ನೀಡಲು ತಯಾರಿಸಿರುವ ಗೈಡ್‌ಲೈನ್ಸ್ ಪ್ರಕಾರ ಸತ್ಯನಾರಾಯಣರಾವ್ ಅವರ ಅರ್ಜಿಯನ್ನು ಪರಿಗಣಿಸಬೇಕೆಂದು ಸರಕಾರಕ್ಕೆ ಸೂಚಿಸಿತು.

ಸಾಹಿತ್ಯ ಕ್ಷೇತ್ರದಲ್ಲಿ ನಾನು ಮಾಡಿರುವ ಸಾಧನೆ ಪರಿಗಣಿಸಿ 2013ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರು ಪರಿಗಣಿಸಿ ಎಂದು ಅರ್ಜಿ ಸಲ್ಲಿಸಿದ್ದೆ. ಆದರೆ ಸರಕಾರ ಪರಿಗಣಿಸಲಿಲ್ಲ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೆ. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ 2015 ಮತ್ತು 2016ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರು ಪರಿಗಣಿಸುವಂತೆ ಸರಕಾರಕ್ಕೆ ಸೂಚಿಸಿತ್ತು. ಆದರೂ ಸರಕಾರ ಕೋರ್ಟ್ ಸೂಚನೆ ಪಾಲಿಸಿಲ್ಲ ಎಂಬುದು ಅರ್ಜಿದಾರರ ಆಕ್ಷೇಪ.

ಸರಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News