ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ವೀಣಾ ಅಚ್ಚಯ್ಯ

Update: 2017-10-19 11:50 GMT

ಸುಂಟಿಕೊಪ್ಪ, ಅ.19: ರಾಜ್ಯ ಕಾಂಗ್ರೆಸ್ ಸರಕಾರದ ಜನೋಪಯೋಗಿ ಯೋಜನೆಗಳು ಜನರ ಮನಸ್ಸಿನಲ್ಲಿ ಅಚ್ಚೊತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಚ್ಚಳ ಬಹು ಮತದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಅವರು ಜಾರಿಗೊಳಿಸಿದ ನೋಟು ಅಮಾನ್ಯೀಕರಣ ಹಾಗೂ ಜಿಎಸ್‍ಟಿಯಿಂದ ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾಗಿದ್ದು, ಮತ್ತೊಂದೆಡೆ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಇದರಿಂದ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಸಿಯುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹಾತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಪಶುಭಾಗ್ಯ, ಕ್ಷೀರಧಾರೆ, ರೈತರ 50,000 ರೂ. ವರೆಗಿನ ಸಾಲಮನ್ನಾ, ವಿದ್ಯಾಸಿರಿ, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಕಲ್ಯಾಣ ಯೋಜನೆ, ಜಲಸಿರಿ ಮೊದಲಾದ ಜನಪರ ಯೋಜನೆಗಳು ಜನರಿಗೆ ಅನುಕೂಲ ಕಲ್ಪಿಸಿರುವುದರಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷವನ್ನು ಹಿಂದಿಕ್ಕಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಬಿಜೆಪಿ ನಾಯಕರ ಪೊಳ್ಳು ಭರವಸೆಗಳಿಗೆ ಜನರು ಮರುಳಾಗುವುದಿಲ್ಲ. ಕೊಡಗಿನ 2 ದಿನ ವಿಧಾನಸಭಾ ಸೀಟು ಕಾಂಗ್ರೆಸ್ ಪಾಲಾಗಲಿದೆ ಎಂದು ಭವಿಷ್ಯ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News