×
Ad

ಹೋರಿ ಬೆದರಿಸುವ ಸ್ಪರ್ಧೆಗೆ ತಡೆ: ಪೊಲೀಸರ ಮೇಲೆ ಕಲ್ಲು ತೂರಾಟ; ಹಲವರಿಗೆ ಗಾಯ

Update: 2017-10-22 20:39 IST

ಶಿವಮೊಗ್ಗ, ಅ.22: ಜಿಲ್ಲೆಯ ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ರವಿವಾರ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಗೆ ತಡೆ ಹಾಕಲು ಮುಂದಾದ ಪೊಲೀಸರ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲ್ಲೆಯಲ್ಲಿ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಬದಲಾಗಿ ಗ್ರಾಮಸ್ಥರು ನಡೆಸಿದ ಕಲ್ಲು ತೂರಾಟದಲ್ಲಿ ಇನ್‌ ಸ್ಪೆಕ್ಟರ್ ಉಮಾಪತಿ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಘಟನೆಯ ನಂತರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ರದ್ದುಗೊಂಡಿದೆ.

ಪ್ರಸಕ್ತ ಗ್ರಾಮದಲ್ಲಿ ಬಿಗುವಿನ ವಾತಾವರಣ ಮನೆ ಮಾಡಿದ್ದು, ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟು ಭದ್ರತಾ ಮೇಲುಸ್ತುವಾರಿಯ ಪರಿಶೀಲನೆ ನಡೆಸುತ್ತಿದ್ದಾರೆ.

ಆದೇಶ ಉಲ್ಲಂಘನೆ: ಜಡೆ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಇತ್ತೀಚೆಗೆ ಜಿಲ್ಲೆಯ ಹಲವೆಡೆ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಸಂಭವಿಸಿದ ಸಾವು-ನೋವುಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸ್ಪರ್ಧೆ ಆಯೋಜನೆ ಮೇಲೆ ನಿರ್ಬಂಧ ಹೇರಿದೆ. ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದೆಲ್ಲದರ ಹೊರತಾಗಿಯೂ ಜಡೆ ಗ್ರಾಮದಲ್ಲಿ ರವಿವಾರ ಗ್ರಾಮಸ್ಥರು ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದರು. ಸ್ಪರ್ಧೆಯಲ್ಲಿ ಸುಮಾರು 50 ಕ್ಕೂ ಅಧಿಕ ಹೋರಿಗಳು ಭಾಗಿಯಾಗಿದ್ದವು. ಸ್ಥಳೀಯರು ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಸ್ಥರು ಸ್ಪರ್ಧೆ ವೀಕ್ಷಣೆಗೆ ಆಗಮಿಸಿದ್ದು, ನೂರಾರು ಜನ ಜಮಾಯಿಸಿದ್ದರು.

ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ಇನ್‌ಸ್ಪೆಕ್ಟರ್ ಉಮಾಪತಿ ನೇತೃತ್ವದ ಪೊಲೀಸ್ ತಂಡವು ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡದಂತೆ ಸೂಚಿಸಿದೆ. ಈ ರೀತಿಯ ಸ್ಪರ್ಧೆ ಆಯೋಜಿಸುವುದರ ಮೇಲೆ ನ್ಯಾಯಾಲಯದ ನಿರ್ಬಂಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತೊಂದೆಡೆ ಗ್ರಾಮಸ್ಥರು ಕಳದೆ ಹಲವು ದಶಕಗಳಿಂದ ಸ್ಪರ್ಧೆ ಆಯೋಜಿಸಿಕೊಂಡು ಬರುತ್ತಿದ್ದು, ಸ್ಪರ್ಧೆ ನಡೆಸಿಯೇ ಸಿದ್ಧವೆಂದು ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಪರ್ಧೆಗೆ ಅಡ್ಡಿಪಡಿಸದಂತೆ ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ.

ಮತ್ತೊಂದೆಡೆ ಪೊಲೀಸರು ಸ್ಪರ್ಧೆಗೆ ಅವಕಾಶ ನೀಡದಿರುವ ನಿರ್ಧಾರ ಮಾಡಿದ್ದಾರೆ. ಈ ವೇಳೆ ಉದ್ರಿಕ್ತ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಇನ್‌ ಸ್ಪೆಕ್ಟರ್ ಉಮಾಪತಿ, ಸಿಬ್ಬಂದಿಗಳಾದ ಚಂದ್ರನಾಯ್ಕೆ, ಪ್ರಭಾಕರ್, ಚಂದ್ರಪ್ಪರವರಿಗೆ ಕಲ್ಲೇಟು ಬಿದ್ದಿದೆ. ತಕ್ಷಣವೇ ಪೊಲೀಸರು ಲಾಠಿ ಪ್ರಹಾರ ನಡೆಸಿ ಗ್ರಾಮಸ್ಥರನ್ನು ಚದುರಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ವ್ಯಾಪಕ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿದೆ.

30ಕ್ಕೂ ಅಧಿಕ ಮಂದಿ ಮೇಲೆ ಪ್ರಕರಣ: ಜಡೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ನಡೆದ ಕಲ್ಲು ತೂರಾಟ ಹಾಗೂ ನಿಯಮಕ್ಕೆ ವಿರುದ್ಧವಾಗಿ ಸ್ಪರ್ಧೆ ಆಯೋಜಿಸಲು ಮುಂದಾದ ಘಟನೆಗೆ ಸಂಬಂಧಿಸಿದಂತೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಸುಮಾರು 30ಕ್ಕೂ ಅಧಿಕ ಗ್ರಾಮಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಐದಾರು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ತಲೆಮರೆಸಿಕೊಂಡವರ ಬಂಧನಕ್ಕೆ ಶೋಧ ಕಾರ್ಯಾಚರಣೆ ಮುಂದವರಿಸಿದ್ದಾರೆ.

ಪ್ರಕರಣ ದಾಖಲು: ಬಂಧನಕ್ಕೆ ಕ್ರಮ; ಎಸ್ಪಿ ಅಭಿನವ್ ಖರೆ

ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ತಡೆಯಲು ಮುಂದಾದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಕಲ್ಲು ತೂರಾಟ ನಡೆಸಿದವರನ್ನು ಬಂಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಸ್ಪಷ್ಟಪಡಿಸಿದ್ದಾರೆ.

ರವಿವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಇದರ ಹೊರತಾಗಿಯೂ ಕೆಲವರು ಸ್ಪರ್ಧೆ ಆಯೋಜನೆಗೆ ಮುಂದಾಗಿದ್ದಾರೆ. ಪ್ರಸ್ತುತ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿದ್ದು, ವ್ಯಾಪಕ ಕಟ್ಟೆಚ್ಚರವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡದಂತೆ ಈಗಾಗಲೇ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಇದರ ಹೊರತಾಗಿಯೂ ಸ್ಪರ್ಧೆ ಆಯೋಜನೆ ಮಾಡಿದರೆ ಸಂಬಂಧಿಸಿದವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಅಭಿನವ್ ಖರೆ ಇದೇ ಸಂದಭರ್ದಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News