ಛಾಪಾ ಕಾಗದ ಕಿಂಗ್‌ಪಿನ್ ಕರೀಂ ಲಾಲ ತೆಲಗಿ ಸ್ಥಿತಿ ಗಂಭೀರ

Update: 2017-10-23 17:40 GMT

ಬೆಂಗಳೂರು, ಅ.23: ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಬ್ದುಲ್ ಕರೀಂ ಲಾಲ್ ತೆಲಗಿ (66) ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿರುವ ಅಬ್ದುಲ್ ಕರೀಂ ಲಾಲ್ ತೆಲಗಿ ಅವರಿಗೆ ಸೋಮವಾರ ರಾತ್ರಿ 8 ಗಂಟೆಯಿಂದ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದು, ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

 ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಬ್ದುಲ್ ಕರೀಂ ಲಾಲ ತೆಲಗಿ ಅವರಿಗೆ ಅನಾರೋಗ್ಯದ ಕಾರಣ ಅ.16 ರಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತಿತ್ತು. ಎರಡು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಸೋಮವಾರ ರಾತ್ರಿ 8 ಗಂಟೆಯಿಂದ ಅವರು ಗಂಭೀರ ಸ್ಥಿತಿಗೆ ತಲುಪಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಅಬ್ದುಲ್ ಕರೀಂ ಲಾಲ್ ತೆಲಗಿ ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಕರಣದಲ್ಲಿ 2002 ರಿಂದ ಜೈಲಿನಲ್ಲಿ ಸಜಾ ಕೈದಿಯಾಗಿದ್ದರು. ಅವರಿಗೆ ಮಧುಮೇಹ ಸೇರಿದಂತೆ ಇನ್ನಿತರೆ ಕಾಯಿಲೆಗಳಿದ್ದು, ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News