ಕನ್ನಡ ಶಾಲೆಗಳ ಗುಣಮಟ್ಟ ಏರಿಕೆ, ಸಬಲೀಕರಣ ಅಗತ್ಯ: ಸಚಿವ ಪ್ರಮೋದ್

Update: 2017-11-01 08:14 GMT

ಉಡುಪಿ, ನ.1: ಕನ್ನಡ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ನಾವು ಇಂದು ಗಂಭೀರ ಚಿಂತನೆ ಮಾಡಬೇಕಾಗಿದೆ. ಆಂಗ್ಲ ಭಾಷೆಯ ಭ್ರಮೆಯಿಂದಾಗಿ ಕೆಲವು ಪ್ರದೇಶಗಳ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಶಾಲೆಗಳ ಗುಣಮಟ್ಟವನ್ನು ಏರಿಸಬೇಕಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಗಟ್ಟಿಗೊಳಿಸಲು ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸುವುದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯ ಪಟ್ಟರು.

ಉಡುಪಿ ಜಿಲ್ಲಾಡಳಿತದ ವತಿಯಿಂದ ಬುಧವಾರ ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಕನ್ನಡ ರಾಜ್ಯೋತ್ಸವ ಸಂದೇಶ ನೀಡಿದರು.

ಆಂಗ್ಲ ಭಾಷೆಯಿಂದ ಕನ್ನಡಕ್ಕಿರುವ ಅಪಾಯಕ್ಕಿಂತಲೂ ಆಂಗ್ಲ ಭಾಷೆಯ ಕುರಿತ ಭ್ರಮೆ ಬಹಳ ಅಪಾಯಕಾರಿಯಾಗಿದೆ. ಇಂದು ಏಕರೂಪದ ಶಿಕ್ಷಣದ ಅಗತ್ಯದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೈಕ್ಷಣಿಕ ಅಸಮಾನತೆಯನ್ನು ಹೋಗಲಾಡಿಸಲು ಈ ಬಗ್ಗೆ ದಿಟ್ಟ ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಜನಾಭಿಪ್ರಾಯ ರೂಪುಗೊಳ್ಳಬೇಕು. ಕನ್ನಡದ ಬೆಳವಣಿಗೆಯ ದೃಷ್ಠಿಯಿಂದ ಇದು ಅಗತ್ಯ ಎಂದವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕನ್ನಡ ಬೆಳೆಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯುವಜನರಲ್ಲಿ ಕನ್ನಡ ಭಾಷೆಯ ಪ್ರೀತಿಯನ್ನು ಹುಟ್ಟಿಸುವ ಕಾರ್ಯಕ್ರಮಗಳಿಗೆ ಅನುದಾನವನ್ನು ಒದಗಿಸಲಾಗಿದೆ. ಎಲ್ಲ ಕಚೇರಿಗಳಲ್ಲಿ ಕನ್ನಡವನ್ನು ಶೇ.100ರಷ್ಟು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಮೋದ್ ತಿಳಿಸಿದರು.

ಈ ಸಂದರ್ಭದಲ್ಲಿ ಐದು ಸಂಘಸಂಸ್ಥೆ ಸೇರಿದಂತೆ ಒಟ್ಟು 52 ಮಂದಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ.ಪಾಟೀಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಉಡುಪಿ ಬೋರ್ಡ್ ಹೈಸ್ಕೂಲ್ ಎದುರು ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪೂಜೆ ನೆರವೇರಿಸಿದ ಸಚಿವ ಪ್ರಮೋದ್ ಮಧ್ವರಾಜ್ ಮೆರವಣಿಗೆಗೆ ಚಾಲನೆ ನೀಡಿದರು.

ರಂಗಮಂದಿರದಲ್ಲಿ ಸಚಿವರಿಂದ ಗೌರವ ರಕ್ಷೆ ಹಾಗೂ ಪಥಸಂಚನ ನಡೆಯಿತು. ಕೊನೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News