ಮಡಿಕೇರಿ : ಕಾನೂನು ಸುವ್ಯವಸ್ಥೆಯ ಸಮಾಲೋಚನಾ ಸಭೆ
ಮಡಿಕೇರಿ, ನ.2 :ಶಾಂತಿ, ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಕಾನೂನನ್ನು ಉಲ್ಲಂಘಿಸಿ ಶಾಂತಿ ಕದಡಲು ಮುಂದಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಲ್ಲದೆ, ತಪ್ಪಿತಸ್ತರನ್ನು ಬಳ್ಳಾರಿ ಜೈಲಿಗೆ ಕಳುಹಿಸುವುದಕ್ಕೂ ಹಿಂಜರಿಯುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಾನೂನು ಸುವ್ಯವಸ್ಥೆಯ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಾಂತಿ ಪ್ರಿಯ ಕೊಡಗು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಶಾಂತಿ, ಸುವ್ಯವಸ್ಥೆಗೆ ಕೊಡಗು ಹೆಸರಾಗಿದ್ದು, ಭಯದ ವಾತಾವರಣ ಯಾರಲ್ಲಿಯೂ ಇರಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾನೂನು ಸುವ್ಯವಸ್ಥೆಗೆ ಭಂಗ ತರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಬಳ್ಳಾರಿ ಜೈಲಿಗೆ ಕಳುಹಿಸಲು ಜಿಲ್ಲಾಡಳಿತ ಹಿಂಜರಿಯುವುದಿಲ್ಲ ಎಂದು ಅವರು ಇದೇ ಸಂದರ್ಭ ಹೇಳಿದರು.
ಕೊಡಗು ಆರ್ಥಿಕ, ಶೈಕ್ಷಣಿಕ, ಕೃಷಿ, ಉತ್ತಮ ಪರಿಸರ, ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರಗಳನ್ನು ಒಳಗೊಂಡಿದ್ದು, ಸಮೃದ್ಧಿಯಾಗಿದೆ. ಅದನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕೊಡಗು ಜಿಲ್ಲೆ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದ್ದು, ಅದನ್ನು ಉಳಿಸಿಕೊಂಡು ಹೋಗುವುದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಶಾಂತಿ ಸುವ್ಯವಸ್ಥೆ ಹಾಳಾದಲ್ಲಿ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆ. ಹೋಂ ಸ್ಟೇ, ರೆಸಾರ್ಟ್‍ಗಳನ್ನು ನಂಬಿ ಬದುಕುವವರ ಜೀವನ ಮಟ್ಟದ ಕುಗ್ಗಲಿದೆ. ಜೊತೆಗೆ ಪ್ರವಾಸಿ ಕೇಂದ್ರಗಳಿಗೆ ಬರುವವರ ಸಂಖ್ಯೆ ಕ್ಷೀಣಿಸಲಿದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಅರೆಸೇನಾ ಪಡೆ ನಿಯೋಜನೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು. ಬೇರೆ ಬೇರೆ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಲಾಗುವುದು. ಅರೆಸೇನಾ ಪಡೆ, ಪೊಲೀಸ್, ಹೋಂ ಗಾರ್ಡ್ ಹೀಗೆ ಎಲ್ಲಾ ಹಂತದ ಪೊಲೀಸರನ್ನು ನಿಯೋಜಿಸಿ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು. ವಿವಿಧ ಕಡೆಗಳಲ್ಲಿ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ಹತ್ತು ಕಡೆ ಚೆಕ್‍ಪೋಸ್ಟ್ ಗಳನ್ನು ನಿರ್ಮಿಸಲಾಗುವುದು, ವಿವಿಧ ಕಡೆ ವಾಹನ ತಪಾಸಣೆ ಮಾಡಲಾಗುವುದು, ಕುಟ್ಟ, ಮಾಕುಟ್ಟ, ಪೆರಂಬಾಡಿ, ಕರಿಕೆ, ಸಂಪಾಜೆ, ಕುಶಾಲನಗರ, ಕೊಡ್ಲಿಪೇಟೆ ಹೀಗೆ ಎಲ್ಲಾ ಕಡೆಯು ಚೆಕ್‍ಪೋಸ್ಟ್ ನಿರ್ಮಿಸಲಾಗುವುದು. ನೂರು ಹೆಚ್ಚುವರಿ ಸಿಸಿಟಿವಿ ಅಳವಡಿಸಲಾಗುವುದು, 50 ವಿಡಿಯೋ ಕ್ಯಾಮರಾ, 50 ಡ್ರೋನ್ ಕ್ಯಾಮರಾ ತರಿಸಲಾಗುವುದು ಎಂದು ಅವರು ಹೇಳಿದರು.
ಬ್ಯಾನರ್, ಬಂಟಿಂಗ್ಸ್, ಪ್ಲೆಕ್ಸ್ ಅಳವಡಿಸಲು ಅನುಮತಿ ನೀಡಬಾರದು. ಅನುಮತಿ ಬೇಕಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಪೊಲೀಸ್ ಇಲಾಖೆಗೆ ಹಿಂಬರಹ ಬರೆದು ಕಳುಹಿಸುವಂತೆ ಪಿ.ರಾಜೇಂದ್ರ ಪ್ರಸಾದ್ ಅವರು ಹೇಳಿದರು.
ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ಹಂತದಲ್ಲಿ ಶಾಂತಿ ಸಭೆಯನ್ನು ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಾಧ್ಯಮಗಳು ಸೇರಿದಂತೆ ಎಲ್ಲರ ಸಹಕಾರದಿಂದ ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ಜಿಲ್ಲೆಗೆ ಯಾವುದೇ ರೀತಿಯ ಕಳಂಕ ತರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮನವಿ ಮಾಡಿದರು.
ಈಗಾಗಲೇ ದಸರಾ, ಕಾವೇರಿ ತುಲಾ ಸಂಕ್ರಮಣ ಜಾತ್ರೆ, ಗಣೇಶೋತ್ಸವವನ್ನು ಹೀಗೆ ಎಲ್ಲವನ್ನು ಶಾಂತಿಯುತವಾಗಿ ಆಚರಿಸಲಾಗಿದೆ. ಮುಂದೆಯೂ ಪ್ರತಿ ಸಂದರ್ಭದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ತಹಶೀಲ್ದಾರರೊಂದಿಗೆ ಪೊಲೀಸ್ ಅಧಿಕಾರಿಗಳು, ತಾ.ಪಂ.ಇಒಗಳು ಸಮನ್ವಯತೆಯಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಯೋಜನಾ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ತಹಶೀಲ್ದಾರ್‍ರಾದ ಕುಸುಮ, ಮಹೇಶ್, ಗೋವಿಂದರಾಜು, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಂದರರಾಜ್, ಪೌರಾಯುಕ್ತರಾದ ಬಿ.ಶುಭ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್, ತಾ.ಪಂ.ಇಒಗಳಾದ ಚಂದ್ರಶೇಖರ್, ಜೀವನ್ ಕುಮಾರ್, ಅಗ್ನಿಶಾಮಕ ಇಲಾಖೆಯ ಚೇತನ್, ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕರಾದ ಗೀತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ ಹಾಜರಿದ್ದರು.