ಖಾಸಗಿ ವೈದ್ಯರ ಮುಷ್ಕರ ಸಮಂಜಸವಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನ.3: ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ವಿಧೇಯಕ ಚರ್ಚೆಯ ಹಂತದಲ್ಲಿದ್ದು, ಇನ್ನೂ ಅಂಗೀಕಾರಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲೇ ಖಾಸಗಿ ವೈದ್ಯರು ಏಕಾಏಕಿ 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿರುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರಕಾರ ಕ್ರಮ ಕೈಗೊಂಡಿದೆ. ಸರಕಾರಿ ವೈದ್ಯರು ರಜೆ ಹಾಕದೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರತರಾಗಿರುವಂತೆ ಹಾಗೂ ಅಗತ್ಯ ಪ್ರಮಾಣದಲ್ಲಿ ಔಷಧಿಗಳ ದಾಸ್ತಾನು ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಸದನ ಸಮಿತಿಯು ತಿದ್ದುಪಡಿ ವಿಧೇಯಕದ ಕುರಿತು ಚರ್ಚೆ ನಡೆಸುತ್ತಿದೆ. ಆನಂತರ ಅದು ವಿಧಾನಮಂಡಲದ ಎದುರು ಚರ್ಚೆಗೊಳಪಡುತ್ತದೆ. ಈ ಎಲ್ಲ ಪ್ರಕ್ರಿಯೆಗಳು ಬಾಕಿಯಿರುವಾಗ ವೈದ್ಯರು ಏಕಾಏಕಿ ಮುಷ್ಕರಕ್ಕೆ ಕರೆ ನೀಡಿ ಪ್ರತಿಭಟನೆಗೆ ಇಳಿದಿರುವುದು ಸರಿಯಲ್ಲ ಎಂದು ಹೇಳಿದರು.
'ಮುಖ್ಯಮಂತ್ರಿ ಧಿಮಾಕಿನಿಂದ ಮಾತನಾಡುತ್ತಿದ್ದು, ಜನರೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜನ ಈಗಾಗಲೇ ಯಡಿಯೂರಪ್ಪರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಪರಿವರ್ತನಾ ರ್ಯಾಲಿ ಹೋದ ಕಡೆ ಎಲ್ಲ ಕಾಂಗ್ರೆಸ್ ಶಕ್ತಿ ಹೆಚ್ಚಲಿದೆ ಎಂದು ಟೀಕಿಸಿದರು.
ಕೇಂದ್ರದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ ಎಂಬ ಯಡಿಯೂರಪ್ಪ ಹೇಳಿಕೆಯನ್ನು ಖಂಡಿಸಿದ ಮುಖ್ಯಮಂತ್ರಿ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಪಡೆಯುವುದು ನಮ್ಮ ಹಕ್ಕು. ಅನುದಾನದ ಸಮರ್ಪಕ ಬಳಕೆಯಾಗದೆ ಇದ್ದರೆ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿರುವ ಬಿಜೆಪಿ ಸದಸ್ಯರು ಪ್ರಶ್ನಿಸಲಿ ಎಂದರು.
ಕೇಂದ್ರದಿಂದ ನಮಗೆ ಬಂದಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದೇವೆ. ಆದರೆ, ಯಡಿಯೂರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿಕೆಗಳನ್ನು ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯ ಪರಿವರ್ತನಾ ರ್ಯಾಲಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಿಂದ ಜನಾಶೀರ್ವಾದ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಸದ್ಯಕ್ಕೆ ಅಂತಹ ಯಾತ್ರೆ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.