ನ.7ರಿಂದ ಡಿಸಿ, ಸಿಇಒಗಳ ಸಭೆ
Update: 2017-11-04 18:41 IST
ಬೆಂಗಳೂರು,ನ. 4: ಆಡಳಿತ ಯಂತ್ರಾಂಗಕ್ಕೆ ಚುರುಕು ಮುಟ್ಟಿಸುವ ಮೂಲಕ ಕ್ರಿಯಾಶೀಲತೆ ತರಲು ನ.7ರಿಂದ ಎರಡು ದಿನಗಳ ಕಾಲ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಿದ್ದಾರೆ. ನ.7ರ ಬೆಳಗ್ಗೆ 10:30ರಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿಸಲಾಗಿದೆ.
ವಿಧಾನಸೌಧದಲ್ಲಿ ನಡೆಯಲಿರುವ ಎರಡು ದಿನಗಳ ಈ ಸಭೆಗೆ ಎಲ್ಲ ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಕಾರ್ಯಾಲಯದಿಂದ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ.