ಜಿಲ್ಲಾ ಮಟ್ಟದ ಕ್ರೀಡಾಕೂಟ: ನಿಟ್ಟೆ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಉಡುಪಿ, ನ.4: ಉಡುಪಿ ಜಿಲ್ಲಾ ಪದವಿ ವೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಸಂತ ಸಿಸಿಲಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ನಿಟ್ಟೆ ಡಾ.ಎನ್‌ಎಸ್‌ಎಎಂ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಪುರುಷರ ವಿಭಾಗದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಮತ್ತು ಮಹಿಳೆಯರ ವಿಭಾಗದಲ್ಲಿ ನಿಟ್ಟೆ ಡಾ.ಎನ್‌ಎಸ್‌ಎಎಂ ಪದವಿಪೂರ್ವ ಕಾಲೇಜು ಸಮಗ್ರ ಪಶಸ್ತಿಯನ್ನು ತನ್ನದಾಗಿಸಿಕೊಂಡಿತು. ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪುರುಷರ ವಿಭಾಗದಲ್ಲಿ ನಿಟ್ಟೆ ಕಾಲೇಜಿನ ದಿನೇಶ್, ಮಹಿಳೆಯರ ವಿಭಾಗದಲ್ಲಿ ಕಿದಿಯೂರು ಶ್ಯಾಮಿಲಿ ಕಾಲೇಜಿನ ಪ್ರಜ್ಞಾ ಕೆ., ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕರಿಷ್ಮಾ ಸನಿಲ್ ಮತ್ತು ದೀಕ್ಷಿತಾ ಪಡೆದುಕೊಂಡರು.
ಇಂದು ನಡೆದ ಸಮಾರೋಪ ಸಮಾರಂಭದ ರಾಜ್ಯ ಮೀನುಗಾರಿಕೆ, ಯುವ ಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಿಜೇತ ತಂಡಕ್ಕೆ ಸಮಗ್ರ ಪ್ರಶಸ್ತಿ ಪ್ರದಾನ ಮಾಡಿದರು. ಅಧ್ಯಕ್ಷತೆಯನ್ನು ಕಾಪು ಶಾಸಕ ವಿನಯ ಕುಮಾರ್ ಸೊರಕೆ ವಹಿಸಿದ್ದರು. ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಧ್ವಜಾ ವರೋಹಣ ನೆರವೇರಿಸಿದರು. ರಾಷ್ಟ್ರಮಟ್ಟದ ಕ್ರೀಡಾಪಟು ಅನಿತಾ ಕರ್ಕಡ ಕ್ರೀಡಾಜ್ಯೋತಿ ಸ್ತಂಭನ ಮಾಡಿದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಕ್ರೀಡಾಪಟು ರೀಟಾ ಉಪಾಧ್ಯಕ್ಷ ವಿಜಯ ಕುಮಾರ್ ಉದ್ಯಾವರ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಡೋನಾಲ್ಡ್ ಸಾಲ್ದಾನ ಮುಖ್ಯ ಅತಿಥಿಗಳಾಗಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿಜಯಲಕ್ಷ್ಮೀ ನಾಯಕ್, ಸಂತ ಸಿಸಿಲಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮರಿಯಾ ಗ್ರೇಸಿ ಎ.ಸಿ., ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ವಂದಿಸಿ ದರು. ಸತೀಶ್ ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.