ರಾಜಕೀಯ ಕುಮ್ಮಕ್ಕಿನಿಂದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿ ಬರುತ್ತಿದೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ನ.6: ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಲಿಂಗಾಯತರು ಮತ್ತು ವೀರಶೈವರ ನಡುವೆ ಒಡಕು ಮೂಡಿಸಿ, ಒಡೆದು ಆಳುವ ನೀತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಕುಮ್ಮಕ್ಕಿನಿಂದಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿ ಬರುತ್ತಿರುವುದು. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕು ಅಡಗಿದೆ. ಆದರೆ, ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದರು.
ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಿನ್ನೆ ನಡೆದಂತಹ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೆಲ ಸ್ವಾಮೀಜಿಗಳು, ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಸಮಾಜಕ್ಕೆ ಮಾರ್ಗದರ್ಶನ ನೀಡುವಂತಹ ಸ್ವಾಮೀಜಿಗಳು ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದ ಕುರಿತು ಧ್ವನಿ ಎತ್ತದ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ರಾಜೀನಾಮೆಗೆ ಆಗ್ರಹಿಸಿರುವ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾರಂಭವನ್ನು ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಮುಖಂಡರು ವಿಫಲಗೊಳಿಸಲು ಸಂಚು ರೂಪಿಸಿದ್ದರು. ಸಮಾವೇಶಕ್ಕೆ ಬೈಕ್‌ಗಳಲ್ಲಿ ತೆರಳುತ್ತಿದ್ದ ಕಾರ್ಯಕರ್ತರನ್ನು ಮಾರ್ಗಮಧ್ಯೆ ತಡೆದು ನಿಲ್ಲಿಸಿದ್ದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದರು.
ಆದರೆ, ತುಮಕೂರು ಜಿಲ್ಲೆಯಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶವನ್ನು ವಿಫಲಗೊಳಿಸಲು ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಮುಖಂಡರಿಂದ ಸಾಧ್ಯವಾಗಿಲ್ಲ. ನ.13ರಿಂದ ಆರಂಭಗೊಳ್ಳಲಿರುವ ವಿಧಾನಸಭೆಯ ಅಧಿವೇಶನ ಮುಕ್ತಾಯಗೊಂಡ ಬಳಿಕ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿದರು.