×
Ad

ಟಿಪ್ಪು ಜಯಂತಿ: ಕೊಡಗು ಜಿಲ್ಲೆಯಾದ್ಯಂತ ಕಟ್ಟೆಚ್ಚರ; ಸಿಆರ್‍ಪಿಎಫ್ ನಿಯೋಜನೆ

Update: 2017-11-07 17:44 IST

ಮಡಿಕೇರಿ, ನ.7: ರಾಜ್ಯ ಸರಕಾರ ನವೆಂಬರ್ 10 ರಂದು ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ವೇಳೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕೊಡಗು ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 

ಜಿಲ್ಲೆಗೆ ತಮಿಳುನಾಡು ಹಾಗೂ ಆಂಧ್ರ ಪ್ರದೇಶದ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಟಿಪ್ಪು ಜಯಂತಿಯನ್ನು ನೆಪ ಮಾಡಿಕೊಂಡು ಸಮಾಜದ ಶಾಂತಿ ಕದಡುವ ಸಾಧ್ಯತೆಗಳಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಖಾಕಿ ಪಡೆ ಕಟ್ಟೆಚ್ಚರ ವಹಿಸಿದೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್ ಅವರ ನೇತೃತ್ವದ ತಂಡ ಮಡಿಕೇರಿ ನಗರದಲ್ಲಿ ಇಂದು ಸಂಚರಿಸಿ ಸಾರ್ವಜನಿಕರಲ್ಲಿ ಅಭಯ ಮೂಡಿಸಿತು. ಕಾನೂನು ಸುವ್ಯವಸ್ಥೆಯ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತಿರುವ ತಮಿಳುನಾಡು ಹಾಗೂ ಆಂಧ್ರ ಪ್ರದೇಶದ ಪೊಲೀಸ್ ಅಧಿಕಾರಿಗಳನ್ನು ಎಸ್ಪಿ ಬರಮಾಡಿಕೊಂಡರು.

ಕಳೆದ ವರ್ಷ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಅಷ್ಟೇನು ದೊಡ್ಡ ಪರಿಣಾಮವನ್ನು ಬೀರಿಲ್ಲವಾದರೂ ಈ ಬಾರಿ ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವುದರಿಂದ ರಾಜಕೀಯ ಲಾಭಕ್ಕಾಗಿ ಕಿಡಿಗೇಡಿಗಳು ಅಶಾಂತಿ ಮೂಡಿಸುವ ಸಾಧ್ಯತೆಗಳಿದೆ. ಇದೇ ಕಾರಣಕ್ಕೆ ರಾಜ್ಯ ಗೃಹ ಇಲಾಖೆ ಟಿಪ್ಪು ಜಯಂತಿ ವಿಚಾರದಲ್ಲಿ ಅತ್ಯಂತ ಸೂಕ್ಷ್ಮ ಎನಿಸಿಕೊಂಡಿರುವ ಕೊಡಗು ಜಿಲ್ಲೆಯ ಬಗ್ಗೆ ಹೆಚ್ಚು ಆಸಕ್ತಿ ತೋರಿ ಬಿಗಿ ಬಂದೋಬಸ್ತ್ ಕೈಗೊಂಡಿದೆ.

ಈಗಾಗಲೇ ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದ್ದು, ಚೆಕ್‍ ಪೋಸ್ಟ್ ಗಳಲ್ಲಿ ಕೂಡ ಹೆಚ್ಚಿನ ನಿಗಾ ವಹಿಸಲಾಗಿದೆ. ಹೆಚ್ಚುವರಿ ಸಿಬ್ಬಂದಿ ನಿಯೋಜನೆ, ಸಿಸಿ ಕ್ಯಾಮರಾ ಅಳವಡಿಕೆ ಸೇರಿದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿರುವ ಕೊಡಗು ಜಿಲ್ಲಾ ಪೊಲೀಸ್ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಿರಲು ಸನ್ನದ್ಧವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News