ದ.ಕ. ಜಿಲ್ಲಾಡಳಿತದಿಂದ ಟಿಪ್ಪು ಜಯಂತಿ: ಆಮಂತ್ರಣ ಪತ್ರಿಕೆಯಲ್ಲಿ ಸಂಸದ ನಳಿನ್ ಹೆಸರಿಲ್ಲ!

Update: 2017-11-08 17:19 GMT

ಮಂಗಳೂರು, ನ.8: ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನ.10ರಂದು ಟಿಪ್ಪು ಸುಲ್ತಾನ್ ಜಯಂತಿ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ರ ಹೆಸರಿಲ್ಲದೆ ಇರುವುದು ಗಮನ ಸೆಳೆದಿದೆ.

ದ.ಕ. ಜಿಪಂ ನ ನೇತ್ರಾವತಿ ಸಭಾಂಗಣದಲ್ಲಿ ನ.10ರಂದು ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಪತ್ರಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ರ ಹೆಸರನ್ನು ಹಾಕಿಲ್ಲ. ಆದರೆ ಬಿಜೆಪಿ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಹಾಗು ಮೀನಾಕ್ಷಿ ಶಾಂತಿಗೋಡು ಅವರ ಹೆಸರುಗಳಿವೆ. 

ಟಿಪ್ಪು ಜಯಂತಿಯ ಬಗ್ಗೆ ಬಿಜೆಪಿ ನಾಯಕರಿಗೆ ಅಸಮಾಧಾನ ಇರುವುದು ಕೂಡ ಸತ್ಯ. ಈ ಹಿಂದೆಯೂ ಹಲವು ಬಾರಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಟಿಪ್ಪು ಜಯಂತಿಯನ್ನು ವಿರೋಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ತನ್ನ ಹೆಸರನ್ನು ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹಾಕದಂತೆಯೂ, ಹಾಕಿದರೆ ಕಾರ್ಯಕ್ರಮದಲ್ಲಿ ಟಿಪ್ಪು ವಿರುದ್ಧವೇ ಮಾತನಾಡುತ್ತೇನೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಸಚಿವರ ಈ ಹೇಳಿಕೆ ವಿವಾದವನ್ನು ಸೃಷ್ಟಿಸಿತ್ತು.

ದ.ಕ. ಜಿಲ್ಲಾಡಳಿತ ಹಮ್ಮಿಕೊಂಡಿರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಕೆಲ ಬಿಜೆಪಿ ನಾಯಕರ ಹೆಸರುಗಳಿದ್ದರೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಸರನ್ನು ಹಾಕಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ಕೇಳಲು ಸಂಸದರನ್ನು ಹಾಗು ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News