×
Ad

ನ.15ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ

Update: 2017-11-09 20:01 IST

ಮಂಗಳೂರು, ನ. 9: 64ನೆ ಅಖಿಲ ಭಾರತ ಸಹಕಾರ ಸಪ್ತಾಹ-2017 ಅಂಗವಾಗಿ ನ. 15ರಂದು ನಗರದ ನೆಹರೂ ಮೈದಾನದಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಸಹಕಾರ ಸಂಸ್ಥೆಗಳು: ಉತ್ಪಾದಕರಿಂಗ ಗ್ರಾಹಕದವರೆಗೆ’’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ತೆಂಗಿನ ನಾರಿನ ಮಹಾಮಂಡಳ ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ದ.ಕ. ಮತ್ತು ಉಡುಪಿ ಜಿಲ್ಲಾ ಮೀನುಗಾರರ ಮಹಾಮಂಡಳ ಮಂಗಳೂರು, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವು ನೆಹರೂ ಮೈದಾನದ ಫುಟ್‌ಬಾಲ್ ಗ್ರೌಂಡ್‌ನಲ್ಲಿ ನಡೆಯಲಿದೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರೂ ಆಗಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.

ಸಹಕಾರ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗ್ಗೆ 10:30ಕ್ಕೆ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಕೊಡಿಯಾಲ್‌ಬೈಲ್‌ನಲ್ಲಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಪ್ರಧಾನ ಕಚೇರಿಯಿಂದ ನೆಹರೂ ಮೈದಾನದವರೆಗೆ ಜಾಥಾ ನಡೆಯಲಿದೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಈ ಜಾಥಾವನ್ನು ಉದ್ಘಾಟಿಸಲಿದ್ದಾರೆ. ಸಚಿವ ಬಿ.ರಮಾನಾಥ ರೈ ಧ್ವಜಾರೋಹಣ ನೆರವೇರಿಸಲಿದ್ದು, ಸಚಿವ ಯು.ಟಿ.ಖಾದರ್ ಅವರು ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ ಎಂದವರು ವಿವರಿಸಿದರು.

ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಶೇಖರ ಗೌಡ ವಿ. ಮಾಲಿ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ, ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಜೆ.ಆರ್.ಲೋಬೊ, ಬಿ.ಎ.ಮೊಯ್ದಿನ್ ಬಾವ, ಮನಪಾ ಮೇಯರ್ ಕವಿತಾ ಸನಿಲ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದ ಅಧ್ಯಕ್ಷ ಜಿ.ಪಿ.ಪಾಟೀಲ, ರಾಜ್ಯ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳದ ಅಧ್ಯಕ್ಷ ಅಣ್ಣಾ ಸಾಹೇಬ ಶಂಕರ ಜೊಲ್ಲೆ, ರಾಜ್ಯ ಸಹಕಾರ ತೆಂಗಿನ ನಾರಿನ ಮಹಾಮಂಡಳದ ಅಧ್ಯಕ್ಷ ಎಂ.ಕೆ.ಪುಟ್ಟರಾಜು, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು, ದ.ಕ. ಮತ್ತು ಉಡುಪಿ ಜಿಲ್ಲಾ ಮೀನುಗಾರರ ಮಹಾಮಂಡಳದ ಅಧ್ಯಕ್ಷ ಯಶಪಾಲ್ ಎ.ಸುವರ್ಣ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರವಿರಾಜ್ ಹೆಗ್ಡೆ, ಹರೀಶ್ ಆಚಾರ್, ಸದಾಶಿವ ಉಳ್ಶಾಲ, ಸತ್ಯನಾರಾಯಣ, ಚಿತ್ತರಂಜನ್ ಬೋಳಾರ, ಪ್ರವೀಣ್ ನಾಯಕ್, ರಾಜಾರಾಂ ಭಟ್, ಸಲೀಂ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News