ಸುವರ್ಣ ವಿಧಾನಸೌಧದ ಮುತ್ತಿಗೆಗೆ ರೈತರ ಯತ್ನ: ಹಲವರ ಬಂಧನ

Update: 2017-11-13 18:06 GMT

ಬೆಳಗಾವಿ, ನ.13: ರೈತರ ಸಾಲಮನ್ನಾ, ಕಬ್ಬಿಗೆ ಸೂಕ್ತ ಬೆಲೆ ನಿಗದಿ, ಬೆಳೆನಷ್ಟಕ್ಕೆ ಪರಿಹಾರ, ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ರೈತರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಲವು ಮಂದಿ ರೈತರನ್ನು ವಶಕ್ಕೆ ಪಡೆದರು.

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಢದಿಂದ ಪಾದಯಾತ್ರೆ ಮೂಲಕ ಬೆಳಗಾವಿಗೆ ಆಗಮಿಸಿದ ರೈತರ ದಂಡು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ರಾಜ್ಯದಲ್ಲಿ ಸತತ ಬರಗಾಲದಿಂದ ರಾಜ್ಯದಲ್ಲಿ ರೈತರು ಕಂಗಾಲಾಗಿದ್ದಾರೆ. ಸರಕಾರ ಸಹಕಾರ ಸಂಘಗಳ ರೈತರ ಕೇವಲ 50ಸಾವಿರ ರೂ.ಸಾಲಮನ್ನಾ ಮಾಡಿದೆ. ಕೃಷಿಕರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಟನ್ ಕಬ್ಬಿಗೆ 3ಸಾವಿರ ರೂ. ದರ ನಿಗದಿ ಮಾಡಬೇಕು. ರೈತ ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ದೊರೆಯುವಂತೆ ಮಾಡಬೇಕೆಂದು ಮನವಿ ಮಾಡಿದರು.

ವಿಧಾನ ಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ರೈತರು ಹೋರಾಟ ನಡೆಸುತ್ತಿದ್ದು, ಸರಕಾರ ರೈತರ ಯಾವುದೇ ಬೇಡಿಕೆಗಳನ್ನೂ ಈಡೇರಿಲ್ಲ. ಕೂಡಲೇ ರೈತರ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News