ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ: ರಾಮಲಿಂಗಾರೆಡ್ಡಿ
ಬೆಂಗಳೂರು, ನ.14: ಬಿಜೆಪಿಯ ರಾಜಕೀಯ ಕಾರಣಕ್ಕಾಗಿ ಸಚಿವ ಕೆ.ಜೆ.ಜಾರ್ಜ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ವಿಧಾನಸೌಧದ ಆವರಣದಲ್ಲಿರುವ ನೆಹರೂ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವಿರೋಧ ಪಕ್ಷದಲ್ಲಿರುವ ಬಿಜೆಪಿಯೂ ರಾಜಕೀಯ ಉದ್ದೇಶಕ್ಕೆ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಕೇಳುತ್ತಿದೆ. ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಅವರ ಕೈವಾಡವಿಲ್ಲ. ಈಗಾಗಲೇ ಸಿಒಡಿ ಇದನ್ನು ಸ್ಪಷ್ಟಪಡಿಸಿದೆ. ಆದರೆ, ಇದನ್ನು ಪ್ರಶ್ನಿಸಿ ಗಣಪತಿ ಅವರ ಕುಟುಂಬದವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನ್ಯಾಯಾಲಯದ ಆದೇಶದಂತೆ ಸಿಬಿಐ ಇದೀಗ ಎಫ್‌ಐಆರ್ ದಾಖಲಿಸಿಕೊಂಡಿದೆ. ಕೆ.ಜೆ.ಜಾರ್ಜ್ ಅವರು ನಿರಪರಾಧಿಯಾಗಿರುವುದರಿಂದ ಅವರ ಪರವಾಗಿ ಸರಕಾರ ನಿಂತಿದೆ. ಈ ಹಿಂದೆಯೂ ಡಿ.ಕೆ.ರವಿ ಪ್ರಕರಣದಲ್ಲೂ ಸುಮ್ಮನೆ ಜಾರ್ಜ್ ಅವರನ್ನು ಗುರಿ ಮಾಡಲಾಗಿತ್ತು ಎಂದರು.
ಹೆಚ್ಚು ಚರ್ಚೆ ಬೇಡ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಹೆಚ್ಚು ಚರ್ಚೆ ಮಾಡುವುದು ಬೇಡ. ಸಮಯ ಬಂದಾಗ ನಾವೇ ಎಲ್ಲ ಹೇಳುತ್ತೇವೆ. ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಸಿಟ್ ತನಿಖಾಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿದ್ದಾರೆ ಎಂದ ಅವರು, ತನಿಖೆ ನಡೆಯುತ್ತಿದೆ. ಈ ವೇಳೆ ತನಿಖೆಯ ಬಗ್ಗೆ ಲಂಕೇಶ್ ಕುಟುಂಬಕ್ಕೆ ಅಸಮಾಧಾನವಾಗಿದೆ ಎಂದು ಹೇಳಿರುವುದು ಸರಿಯಲ್ಲ. ಸ್ವಲ್ಪ ಸಮಾಧಾನ ಮಾಡಿಕೊಳ್ಳಬೇಕು ಎಂದು ನುಡಿದರು.
ಬಲಿಷ್ಠ ನಾಯಕ ನೆಹರೂ:ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ ಅವರು ದೇಶದ ಬಲಿಷ್ಠ ನಾಯಕರಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಕರ್ನಾಟಕದಲ್ಲಿ ಹಲವು ಕೈಗಾರಿಕೆಗಳು ಸ್ಥಾಪನೆಯಾದವು. ಆಗ ರಾಜ್ಯದಲ್ಲಿ ಕೆ.ಸಿ.ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದರು. ನಿರುದ್ಯೋಗ ನಿವಾರಣೆಗೆ ಅವರು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದರು ಎಂದು ರಾಮಲಿಂಗಾರೆಡ್ಡಿ ಸ್ಮರಿಸಿದರು.