×
Ad

ಅಧಿವೇಶನದಲ್ಲಿ ಎ.ಜೆ.ಸದಾಶಿವ ವರದಿ ಅಂಗೀಕರಿಸುವಂತೆ ಒತ್ತಾಯ

Update: 2017-11-15 22:08 IST

ಬೆಂಗಳೂರು, ನ.15: ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗವು ನೀಡಿರುವ ವರದಿಯನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸುವಂತೆ ಕರ್ನಾಟಕ ದಲಿತ ಸಮಿತಿ ಆಗ್ರಹಿಸಿದೆ.

ಬುಧವಾರ ನಗರದ ಬನ್ನಪ್ಪಪಾರ್ಕ್ ಬಳಿಯಿಂದ ಕೆಜಿ ರಸ್ತೆಯ ಜಿಲ್ಲಾಧಿಕಾರಿ ಕಚೇರಿವರೆಗೂ ಕರ್ನಾಟಕ ದಲಿತ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ಬೆಳಗಾವಿ ಅಧಿವೇಶನದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕರಿಸಬೇಕು. ಜತೆಗೆ ವರದಿಯ ಅನುಮೋದನೆಗಾಗಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ಕೈಗಾರಿಕ ಕ್ಷೇತ್ರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಪಾಲುಗಾರಿಕೆಯನ್ನು ಕಲ್ಪಿಸಿ, ಪ್ರಗತಿಯ ತಾರತಮ್ಯ ಸರಿಪಡಿಸಲು ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವರದಿ ನೀಡಲಾಗಿದೆ. ದಲಿತರ ಆರ್ಥಿಕ ಅಭಿವೃದ್ಧಿಗೆ ಮೀಸಲಿರುವ ಎಸ್ಸಿ-ಎಸ್ಟಿ ಮತ್ತು ಗುತ್ತಿಗೆ ವಿಶೇಷ ಘಟಕ ಯೋಜನೆಯ ಅನುದಾನವನ್ನು ಕ್ಷೇತ್ರವಾರು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕವಾಗಿದ್ದ ಸದಾಶಿವ ಆಯೋಗದ ವರದಿಯನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಗದ ವರದಿಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಭಡ್ತಿ ಮೀಸಲಾತಿ ಸಂಬಂಧಿತ ಆದೇಶದ ಮರುಪರಿಶೀಲನೆಗೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ರಾಜ್ಯದಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News