ಕೆ.ಸಿ.ರೆಡ್ಡಿ ಸ್ಮಾರಕಕ್ಕೆ ಎರಡು ಕೊಟಿ ರೂ.ಅನುದಾನ: ಉಮಾಶ್ರೀ
ಬೆಳಗಾವಿ, ನ.20: ರಾಜ್ಯದ ಮೊದಲ ಮುಖ್ಯಮಂತ್ರಿ ಕ್ಯಾಸಂಬಳ್ಳಿ ಚಂಗಲರಾಯ ರೆಡ್ಡಿ (ಕೆ.ಸಿ.ರೆಡ್ಡಿ) ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಬೇಕೆಂಬ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಸೋಮವಾರ ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯೆ ಡಾ.ಜಯಮಾಲಾ ರಾಮಚಂದ್ರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೊರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪುತ್ಥಳಿ ಸ್ಥಾಪನೆಗೆ ಅಡ್ಡಿಯಾಗಿದೆ. ನಮ್ಮ ಸರ್ಕಾರ 2017ರ ಆಯವ್ಯಯದಲ್ಲಿ ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿಯಲ್ಲಿ ಅದಕ್ಕಾಗಿ 10 ಎಕರೆ ಜಮೀನು ಗುರುತಿಸಲಾಗಿದೆ ಎಂದರು.
ಈ ವೇಳೆ ಮಧ್ಯ ಪ್ರವೇಶಿಸಿದ ಬಿಜೆಪಿ ಸದಸ್ಯ ಡಿ.ಎಸ್.ವೀರಯ್ಯ, ಕೆ.ಸಿ.ರೆಡ್ಡಿಯವರು ನಮ್ಮ ರಾಜ್ಯದ ಮೊದಲ ಮುಖ್ಯಮಂತ್ರಿ. ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅದಕ್ಕೆ ಸಚಿವೆ ಉಮಾಶ್ರೀ ಈ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.