ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಕಾರ್ಯಪಡೆ ರಚನೆ: ಸಚಿವ ರಾಮಲಿಂಗಾರೆಡ್ಡಿ

Update: 2017-11-21 14:45 GMT

ಬೆಳಗಾವಿ, ನ.21: ರಾಜ್ಯದೊಳಗೆ ಅಕ್ರಮವಾಗಿ ನುಸುಳಿರುವ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಮಾಡಲು ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಅಕ್ರಮವಾಗಿ ವಾಸ ಮಾಡುತ್ತಿರುವ ಬಾಂಗ್ಲಾ ದೇಶದ 79 ಪ್ರಜೆಗಳನ್ನು ಪತ್ತೆ ಮಾಡಲಾಗಿದೆ. ಅವರ ವಿರುದ್ಧ ವಿದೇಶಿ ಕಾಯ್ದೆ ಅನ್ವಯ ಪ್ರಕರಣಗಳನ್ನು ದಾಖಲಿಸಿ ನ್ಯಾಯಾಲಯ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಅವರ ದೇಶಕ್ಕೆ ವಾಪಸ್ ಕಳುಹಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈವರೆಗೆ 51 ಅಕ್ರಮ ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ವಲಸಿಗರು ವಿಮಾನ ನಿಲ್ದಾಣ, ಬಂದರು ಅಥವಾ ಭೂಮಾರ್ಗವಾಗಿ ದೇಶವನ್ನು ತೊರೆಯಲು ಸಾಧ್ಯವಾಗದಂತೆ ತೀವ್ರ ನಿಗಾ ವಹಿಸಲಾಗಿದೆ. ಕೇಂದ್ರ ಸರಕಾರದ ಕಾಯ್ದೆಯಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಕ್ರಮ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳದಂತೆ ಕೇಂದ್ರ ಸರಕಾರ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಿದೆ ಎಂದರು.

ರಾಜ್ಯದಲ್ಲಿ ವಾಸಿಸುತ್ತಿರುವ ಅಕ್ರಮ ವಲಸಿಗರ ಕುರಿತಂತೆ ವಿಶೇಷ ಕಾರ್ಯಪಡೆ ಜಿಲ್ಲಾವಾರು ಕಾರ್ಯಾಚರಣೆ ಕೈಗೊಂಡು ರಾಜ್ಯದಿಂದ ಹೊರಹಾಕುವ ಕುರಿತಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸದಸ್ಯರಾದ ಸುನೀಲ್‍ಕುಮಾರ್, ಸಿ.ಟಿ.ರವಿ, ಸುರೇಶ್‍ಕುಮಾರ್ ಕೇಳಿದ ಉಪಪ್ರಶ್ನೆಗಳಿಗೆ ಅವರು ಈ ಮೇಲಿನಂತೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News