ಮಂಗಳೂರು-ಮೂಡಬಿದ್ರೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕ್ರಮ: ಸಚಿವ ಮಹದೇವಪ್ಪ

Update: 2017-11-22 14:11 GMT

ಬೆಳಗಾವಿ, ನ.22: ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿಯನ್ನು ನೇರ ಹಾಗೂ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕ್ರಮವಹಿಸಲಾಗಿದ್ದು, ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿ’ಸೋಜಾ ಪ್ರಸ್ತಾಪಿಸಿದ ವಿಷಯಕ್ಕೆ ಲಿಖಿತ ಉತ್ತರ ನೀಡಿರುವ ಅವರು, ಮಂಗಳೂರು-ಮೂಡಬಿದ್ರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ 2017-18ನೆ ಸಾಲಿನ ನಿಯತಕಾಲಿಕ ನವೀಕರಣ ಯೋಜನೆಯಲ್ಲಿ ಕಿ.ಮೀ 706 ರಿಂದ 743.90 ವರೆಗೆ ನಿರ್ಮಿಸಲು 17.50 ಕೋಟಿ ರೂ.ವರೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಕ್ರಿಯಾ ಯೋಜನೆಗೆ ಕೇಂದ್ರ ಸರಕಾರದಿಂದ ಅನುಮೋದನೆ ದೊರೆತ ಬಳಿಕ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು, ಅಲ್ಲಿಯವರೆಗೆ ಕೇಂದ್ರ ಸರಕಾರದಿಂದ ಬಿಡುಗಡೆಯಾದ ನಿರ್ವಹಣೆ ಹಾಗೂ ದುರಸ್ತಿ ಅನುದಾನದಲ್ಲಿ ನಿರ್ವಹಣಾ ಕಾಮಗಾರಿಯನ್ನು ಕೈಗೊಂಡು ಸುಗಮ ವಾಹನ ಸಂಚಾರಕ್ಕೆ ಯೋಗ್ಯವಾಗಿಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಈ ಹೆದ್ದಾರಿಯ ವಿವರವಾದ ಯೋಜನಾ ವರದಿಯನ್ನು ತಯಾರಿಸಲು ವಹಿಸಿರುವುದರಿಂದ ಕೇಂದ್ರ ಸರಕಾರವು ಯಾವುದೇ ಮೂಲ ಕಾಮಗಾರಿಗೆ ಅನುಮೋದನೆ ನೀಡಿಲ್ಲ. ಇದರಿಂದಾಗಿ, ಈ ಹೆದ್ದಾರಿಯಲ್ಲಿ ನಿರ್ವಹಣಾ ಕಾಮಗಾರಿಗಳನ್ನು ಮಾತ್ರ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News