ಬೆಳಗಾವಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಡಿಸೆಂಬರ್‍ನಲ್ಲಿ ಅಡಿಗಲ್ಲು: ಸಚಿವ ಮಂಜು

Update: 2017-11-23 18:18 GMT

ಬೆಳಗಾವಿ, ನ.23: ಬೆಳಗಾವಿ ನಗರದಲ್ಲಿ ಪಶು ಇಲಾಖೆಯಿಂದ 3.60 ಕೋಟಿ ರೂ.ವೆಚ್ಚದಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಡಿಸೆಂಬರ್ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಎ.ಮಂಜು ತಿಳಿಸಿದ್ದಾರೆ.

ಗುರುವಾರ ನಗರದ ಗೋಂಧಳಿ ಗಲ್ಲಿಯಲ್ಲಿರುವ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಪ್ರತೀ ಜಿಲ್ಲೆಗೊಂದು ಪಶು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವನ್ನು ನಿರ್ಮಿಸಲಾಗುವುದು. ಈ ಮೂಲಕ ಕುರಿ ಹಾಗೂ ಮೇಕೆಗಳ ಆರೋಗ್ಯಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.

ಈಗಾಗಲೇ 50 ಲಕ್ಷ ರೂ.ವೆಚ್ಚದಲ್ಲಿ ಕರ್ನಾಟಕ ಸಹಕಾರಿ ಕುಕ್ಕುಟ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದ ವ್ಯಾಪ್ತಿಯಲ್ಲಿ 7.50 ಕೋಟಿ ರೂ.ವೆಚ್ಚದಲ್ಲಿ ಕುರಿ ಮತ್ತು ಮೇಕೆಗಳ ಆಧುನಿಕ ವಧಾಗಾರ ಸ್ಥಾಪನೆಗೆ 2017-18ನೆ ಸಾಲಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ರೈತರು ಹಾಗೂ ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಅನೇಕ ಯೋಜನೆಗಳನ್ನು ರೂಪಿಸಲಾಗಿದ್ದು ಜನರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು ಮಂಜು ಸಲಹೆ ನೀಡಿದರು. 

ರಾಜ್ಯ ಪಶುಸಂಗೋಪನಾ ಇಲಾಖೆಯ ಆಯುಕ್ತ ಡಾ.ಶೇಖರ್, ಉಪನಿರ್ದೇಶಕ ಡಾ.ಬಿ.ಸಿ.ಜಂಬಗಿ, ಜಿಲ್ಲಾ ಪಶು ಇಲಾಖೆಯ ಉಪನಿರ್ದೇಶಕ ಡಾ.ಚಂದ್ರಶೇಖರ್ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News