ಮಡಿಕೇರಿ: ಕಾಲಮಿತಿಯಲ್ಲಿ ಅನುದಾನ ವಿನಿಯೋಗಕ್ಕೆ ಡಿಸಿ ಸೂಚನೆ

Update: 2017-11-23 18:48 GMT

ಮಡಿಕೇರಿ, ನ.23: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ(ಎಸ್ಸಿಪಿ-ಟಿಎಸ್ಪಿ)ಯಡಿ ಮೀಸಲಿಟ್ಟಿರುವ ಅನುದಾನವನ್ನು ಕಾಲಮಿತಿಯೊಳಗೆ ವಿನಿಯೋಗಿಸಿ ಪ್ರಗತಿ ಸಾಧಿಸಬೇಕು. ಪ್ರಗತಿ ಸಾಧಿಸದಿರುವ ಇಲಾಖೆಗಳಿಗೆ ನೊಟೀಸ್ ನೀಡುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸ್ಪಷ್ಟ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನಾ ಕಾರ್ಯಕ್ರಮದ ಪ್ರಗತಿ ಮಾಹಿತಿ ಪಡೆದು ಅವರು ಮಾತನಾಡಿದರು.
ಪ್ರತಿಯೊಂದು ಇಲಾಖೆಯಲ್ಲಿಯೂ ಕಾರ್ಯಕ್ರಮಗಳನ್ನು ನಿಗದಿಪಡಿಸಿಕೊಂಡು ಪ್ರಗತಿ ಸಾಧಿಸಬೇಕು. ಇಲ್ಲದಿದ್ದಲ್ಲಿ ಕಾಯ್ದೆಯಂತೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಸರಕಾರದ ವಿವಿಧ ಇಲಾಖೆಗಳು ಶೇ.24ರಷ್ಟು ಅನುದಾನ ಖರ್ಚು ಮಾಡಬೇಕಿದ್ದು, ಈ ಸಂಬಂಧ ಅಂಕಿ-ಅಂಶವನ್ನು ನಿಖರವಾಗಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಕಾರ್ಯಕ್ರಮ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಯಾದೇವಿ ಗಲಗಲಿ ಎಸ್ಸಿಪಿ-ಟಿಎಸ್ಪಿ ಯೋಜನೆ ಸಂಬಂಧ ಹಲವು ಮಾಹಿತಿ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮರಿಯಾ ಜೋಸೆಫ್, ಸೂರ್ಯಸೇನ್, ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ರಾಮಪ್ಪ, ಜಿಪಂ ಇಂಜಿನಿಯರ್ ರಾಜ್‌ಕುಮಾರ್ ರೆಡ್ಡಿ, ವೈದ್ಯಕೀಯ ಕಾಲೇಜಿನ ಅಧೀಕ್ಷಕಿ ಮೇರಿ ನಾಣಯ್ಯ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಕೃಷ್ಣ, ಪಿಡಬ್ಲ್ಯುಡಿ ಇಂಜಿನಿಯರ್ ನಟೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಯಲಕ್ಷ್ಮೀಬಾಯಿ, ಆಯುಷ್ ಅಧಿಕಾರಿ ರಾಮಚಂದ್ರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News