ವಿಧಾನಸಭಾ ಚುನಾವಣೆಯಲ್ಲಿ ಪೌರ ಕಾರ್ಮಿಕರಿಗೆ ಅವಕಾಶ ನೀಡಲು ಆಗ್ರಹ
ಬೆಂಗಳೂರು, ನ.27: ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.2 ರಷ್ಟು ಪರಿಶಿಷ್ಟ ಜಾತಿಗೆ ಸೇರಿದ ಪೌರ ಕಾರ್ಮಿಕ ಸಮುದಾಯಕ್ಕೆ ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಪೌರ ಕಾರ್ಮಿಕರ ಸಮುದಾಯ ವೇದಿಕೆ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಎಂ.ಸುಬ್ಬರಾಯುಡು, ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುವ ಪೌರಕಾರ್ಮಿಕರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಲ್ಲ ಕ್ಷೇತ್ರಗಳಲ್ಲಿಯೂ ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದಾರೆ. ನಗರದಲ್ಲಿ 2.5 ಲಕ್ಷಕ್ಕೂ ಅಧಿಕ ಪೌರ ಕಾರ್ಮಿಕ ಮತದಾರರಿದ್ದು, ಯಾವುದೇ ಅಭ್ಯರ್ಥಿಯ ಗೆಲುವು ಮತ್ತು ಸೋಲಿನ ಸಂದರ್ಭದಲ್ಲಿ ಇವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್, ಬಿಜೆಪಿ, ಜನತಾದಳದಲ್ಲಿ ಪೌರ ಕಾರ್ಮಿಕ ಸಮುದಾಯಕ್ಕೆ ಸೇರಿದ ಹಲವರು ಹತ್ತಾರು ವರ್ಷಗಳಿಂದ ಪಕ್ಷ ಸಂಘಟನೆಗಾಗಿ ದುಡಿಯುತ್ತಿದ್ದಾರೆ. ಹೀಗಾಗಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡುವ ಮೂಲಕ ಪೌರ ಕಾರ್ಮಿಕ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ನಮ್ಮ ಸಮುದಾಯ ಯಾರೊಬ್ಬ ಪ್ರತಿನಿಧಿ ಇಲ್ಲದಿರುವುದರಿಂದ ಶಾಸನ ಸಭೆಯಲ್ಲಿ ನಮ್ಮ ಪರವಾಗಿ ಧ್ವನಿ ಎತ್ತುವವರಿಲ್ಲ ಎಂದು ನುಡಿದರು.
ಇದುವರೆಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಮ್ಮ ಸಮುದಾಯಕ್ಕೆ ಟಿಕೆಟ್‌ನೀಡಿಲ್ಲ. ಕಾಂಗ್ರೆಸ್ 2 ಬಾರಿ ಮಾತ್ರ ಅವಕಾಶ ನೀಡಿತ್ತಾದರೂ, ಕಳೆದ 10 ವರ್ಷಗಳಿಂದ ನಮಗೆ ಯಾವುದೇ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಆದುದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.