×
Ad

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡಲು ನಾವು ಬಿಡುವುದಿಲ್ಲ: ವಾಟಾಳ್ ನಾಗರಾಜ್

Update: 2017-11-29 22:08 IST

ಬೆಂಗಳೂರು, ನ.29: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾರಾಷ್ಟ್ರದ ಮುಖಂಡ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಉದ್ಧವ್ ಠಾಕ್ರೆ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕದ ಒಂದು ಭಾಗವಾಗಿರುವ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಹೇಳಲು ಉದ್ಧವ್ ಠಾಕ್ರೆ ಯಾರು. ಬೆಳಗಾವಿ ಕನ್ನಡಿಗರದ್ದು. ಅದಕ್ಕಾಗಿ ಹಲವಾರು ಜನರು ದುಡಿದಿದ್ದಾರೆ. ಹೀಗಾಗಿ, ಒಂದೇ ಒಂದು ಅಡಿಯಷ್ಟು ಮಹಾರಾಷ್ಟ್ರಕ್ಕೆ ಬಿಡೋಕೆ ನಾವು ಬಿಡುವುದಿಲ್ಲ ಎಂದು ಹೇಳಿದರು.

ಮರಾಠಿಗಳ ಹಾವಳಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಗಡಿ ಪ್ರದೇಶದಲ್ಲಿ ಮಿತಿ ಮೀರಿದ್ದು, ಇತ್ತೀಚಿಗೆ ಅಧಿವೇಶನದ ಸಮಯದಲ್ಲಿ ಬೆಳಗಾವಿಯಲ್ಲಿ ಮರಾಠಿಗಳು ರ್ಯಾಲಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯ ಸರಕಾರ ಎಂಇಎಸ್ ಹಾಗೂ ಇತರೆ ಮರಾಠಿ ಸಂಘಟನೆಗಳನ್ನು ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೂಡಲೇ ರಾಜ್ಯ ಸರಕಾರ ಉದ್ಧವ್ ಠಾಕ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ವಿಭಜನೆ ಮಾಡಲು ಮುಂದಾದರೆ ದೊಡ್ಡ ಅನಾಹುತ ಎದುರಿಸಬೇಕಾಗುತ್ತದೆ. ಅಲ್ಲದೆ, ಇಲ್ಲಿ ನಡೆಯುವ ಎಲ್ಲ ಅನಾಹುತಗಳಿಗೆ ರಾಜ್ಯ ಸರಕಾರವೇ ನೇರ ಹೊಣೆಯಾಗುತ್ತದೆ ಎಂದ ಅವರು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News